ಚಾಮರಾಜನಗ : ಜಿಲ್ಲೆಯಲ್ಲಿ ಅಕ್ಟೋಬರ್ 17, 18 ಹಾಗೂ 19ರಂದು ಮೂರು ದಿನಗಳ ಕಾಲ ಚಾಮರಾಜನಗರ ದಸರಾ ಮಹೋತ್ಸವವನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಉತ್ಸವದ ಯಶಸ್ಸಿಗೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚಾಮರಾಜನಗರ ಜಿಲ್ಲಾ ದಸರಾ ಉತ್ಸವ-2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಭಾಗವಾಗಿ ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿಯೂ ದಸರಾ ಮಹೋತ್ಸವ ಆಯೋಜಿಸಲಾಗುತ್ತಿದೆ. ಹಿಂದೆ ಕೆಲವು ಬಾರಿ ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ದಸರಾ ಆಚರಿಸಿರಲಿಲ್ಲ. ಪ್ರಸ್ತುತ ಜಿಲ್ಲೆಯನ್ನು ತೀವ್ರ ಬರಪೀಡಿತ ಎಂದು ಘೋಷಿಸಲಾಗಿದ್ದರೂ ಮಳೆಯಾಗಿರುವುದರಿಂದ ಜನಜೀವನ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ದಸರಾ ಉತ್ಸವ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಇದರಿಂದ ಜಿಲ್ಲೆಯ ಜನರ ಅಭಿಲಾಷೆ ಈಡೇರಿದಂತಾಗಿದೆ ಎಂದು ಸಚಿವರು ತಿಳಿಸಿದರು.
ಮೂರು ದಿನಗಳ ದಸರಾ ಮಹೋತ್ಸವದ ಅಂಗವಾಗಿ ರೈತ ದಸರಾ, ಮಹಿಳಾ ದಸರಾ, ಯುವಸಂಭ್ರಮ, ಮ್ಯಾರಥಾನ್, ಪಾರಂಪರಿಕ ನಡಿಗೆ, ದಸರಾ ಓಟ ಹಾಗೂ ದಸರಾ ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಮುಖ್ಯ ವೇದಿಕೆಯಲ್ಲಿ ರಸಮಂಜರಿ ಹಾಗೂ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಹಾರ ಮೇಳ, ಪುಸ್ತಕ ಮೇಳ, ವಸ್ತುಪ್ರದರ್ಶನ ಮತ್ತು ಫಲಪುಷ್ಪ ಪ್ರದರ್ಶನವೂ ಇರಲಿದ್ದು, ಹೆಲಿ ಟೂರಿಸಂ ಅಭಿವೃದ್ಧಿಯ ಉದ್ದೇಶದಿಂದ ಹೆಲಿಕಾಪ್ಟರ್ ಶೋ ಆಯೋಜಿಸುವುದು ಈ ಬಾರಿಯ ವಿಶೇಷ ಆಕರ್ಷಣೆಯಾಗಿದೆ ಎಂದು ಸಭೆಯಲ್ಲಿ ವಿವರಿಸಿದರು.
ದಸರಾ ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ಒಳಗೊಂಡ ಮೆರವಣಿಗೆ, ಸ್ವಾಗತ, ವೇದಿಕೆ, ಆಹಾರ, ಸ್ವಚ್ಛತೆ, ಸಾಂಸ್ಕೃತಿಕ ಹಾಗೂ ವಸತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ದಸರಾ ಆಯೋಜನೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡಬಾರದು. ಕಡಿಮೆ ಅವಧಿಯಲ್ಲಿ ಉತ್ಸವದ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕಿರುವುದರಿಂದ ಎಲ್ಲ ಸಮಿತಿಗಳ ಅಧಿಕಾರಿಗಳು ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಸಿದ್ಧತೆಗಳನ್ನು ಚುರುಕುಗೊಳಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಎಲ್ಲ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ದೀಪಾಲಂಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೆಳೆಯುವಂತಿರಬೇಕು. ನಗರದ ಪ್ರವೇಶದ್ವಾರಗಳಲ್ಲಿ ‘ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸುಸ್ವಾಗತ’ ಎಂಬ ಸಂದೇಶದೊಂದಿಗೆ ಆಕರ್ಷಕ ಸ್ವಾಗತ ಕಮಾನುಗಳನ್ನು ನಿರ್ಮಿಸಬೇಕು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಜನರನ್ನು ಆಕರ್ಷಿಸುವಂತಿರಬೇಕು. ಜಿಲ್ಲೆಯ ಯಾವುದೇ ಭಾಗದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತರಾಗಬಾರದು. ಎಲ್ಲ ಕಲಾವಿದರಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಲಾವಿದರ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವಂತೆ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಖ್ಯ ವೇದಿಕೆಯ ಕಾರ್ಯಕ್ರಮಗಳು ನಡೆಯಲಿದ್ದು, ವರನಟ ಡಾ. ರಾಜ್‌ಕುಮಾರ್ ರಂಗಮಂದಿರ, ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಮಹರ್ಷಿ ವಾಲ್ಮೀಕಿ ಭವನಗಳಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಯುವಸಂಭ್ರಮದಲ್ಲಿ ವೈದ್ಯಕೀಯ, ಕಾನೂನು, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ವೇದಿಕೆ ಆಕರ್ಷಕವಾಗಿ ನಿರ್ಮಾಣವಾಗಬೇಕು. ಚಾಮರಾಜೇಶ್ವರ ದೇವಸ್ಥಾನ, ಜನನಮಂಟಪ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮ ನೀಡುವ ಕಲಾವಿದರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚಿಸಿದರು.
ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ, ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಪ್ರವೇಶದ್ವಾರಗಳಲ್ಲಿ ವಿಶೇಷ ದೀಪಾಲಂಕಾರ ಮಾಡಬೇಕು. ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ದಸರಾ ಕಾರ್ಯಕ್ರಮಗಳ ಸುಗಮ ನಿರ್ವಹಣೆ ಹಾಗೂ ಮೇಲ್ವಿಚಾರಣೆಗಾಗಿ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳ ಆಯೋಜನೆಗೆ ರೂಪುರೇಷೆ ಸಿದ್ಧಪಡಿಸಲಾಗಿದ್ದು, ಸಮಿತಿಗಳು ಕಾರ್ಯಪ್ರವೃತ್ತವಾಗಲಿವೆ. ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ಹಾಗೂ ಜನಾಕರ್ಷಕವಾಗಿ ಆಚರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ಉಪವಿಭಾಗಾಧಿಕಾರಿ ದಿನೇಶ್‌ಕುಮಾರ್ ಮೀನಾ, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಡಿವೈಎಸ್ಪಿ ಸ್ನೇಹರಾಜ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ :ಕಾರ್ತಿಕ್ ಗೌಡ ಹನೂರು.

