
ಧಾರವಾಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸಲು ಮತ್ತು ಮಹಿಳಾ ಫಲಾನುಭವಿಗಳನ್ನು ಗೌರವಿಸಲು ತಾಲೂಕು ಮಟ್ಟದ ಬೃಹತ್ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದ್ದಾರೆ. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳು ಧಾರವಾಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಇವುಗಳ ಸದುಪಯೋಗದ ಬಗ್ಗೆ ಜನರಲ್ಲಿ ಇನ್ನಷ್ಟು ಅರಿವು ಮೂಡಿಸುವುದು ಈ ಸಮಾವೇಶಗಳ ಮುಖ್ಯ ಉದ್ದೇಶವಾಗಿದೆ. ಗ್ಯಾರಂಟಿ ಯೋಜನೆಗಳ ಬಹುತೇಕ ಫಲಾನುಭವಿಗಳು ಮಹಿಳೆಯರೇ ಆಗಿರುವುದರಿಂದ, ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಒಂದೆಡೆ ಸೇರಿಸಿ ಗೌರವಿಸುವುದು ಸರ್ಕಾರದ ಆಶಯವಾಗಿದೆ ಎಂದು ಅವರು ಹೇಳಿದರು. ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಯೋಜನೆಗಳ ಲಾಭ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಯಾವುದೇ ಕಾರಣಕ್ಕೂ ಯೋಜನೆಗಳು ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಶೇಷವಾಗಿ ಯುವನಿಧಿ ಯೋಜನೆ ಬಗ್ಗೆ ಗ್ರಾಮ ಮಟ್ಟದಲ್ಲಿ ಮತ್ತು ಕೋಚಿಂಗ್ ಸೆಂಟರ್ಗಳಲ್ಲಿ ಹೆಚ್ಚಿನ ಮಾಹಿತಿ ಶಿಬಿರಗಳನ್ನು ನಡೆಸಿ ನಿರುದ್ಯೋಗಿ ಯುವಕರಿಗೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಅರಿವು ಮೂಡಿಸಬೇಕು. ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದರೆ, ತಕ್ಷಣ ಅಂತಹ ಪ್ರಕರಣಗಳನ್ನು ಗುರುತಿಸಿ ನಿಯಮಾನುಸಾರ ಹಣ ವಾಪಸ್ ಪಡೆಯಲು ಕ್ರಮ ಕೈಗೊಳ್ಳಬೇಕು. ಸಾರಿಗೆ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಬೇಕು ಎಂದು ಪಾಟೀಲ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಲಭಿಸುವ ಸಹಾಯಧನವು ಬಡ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಬೇಕು. ಕ್ಷೇತ್ರ ಮಟ್ಟದ ಸಿಬ್ಬಂದಿಗಳು ಅರ್ಹರನ್ನು ಗುರುತಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಇದುವರೆಗೆ ಯುವನಿಧಿ ಯೋಜನೆಯಡಿ 11,501 ಅರ್ಜಿಗಳು ಸಲ್ಲಿಕೆಯಾಗಿದ್ದು, 26.19 ಕೋಟಿ ರೂ. ಸಹಾಯಧನ ವಿತರಿಸಲಾಗಿದೆ. ಶಕ್ತಿ ಯೋಜನೆಯಡಿ 58 ಕೋಟಿಗೂ ಅಧಿಕ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 4 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಸುಮಾರು 1889 ಕೋಟಿ ರೂ. ಹಣ ತಲುಪಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರು, ವಿವಿಧ ಸಮಿತಿಗಳ ಸದಸ್ಯರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

