
ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 30ರಂದು ಕೊಳ್ಳೇಗಾಲಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಬುಧವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊಳ್ಳೇಗಾಲ ಪಟ್ಟಣದ ಎಂಜಿಎಸ್ವಿ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಶಾಸಕರು, ಕಾರ್ಯಕ್ರಮ ನಡೆಯಲಿರುವ ಸ್ಥಳವನ್ನು ಪರಿಶೀಲಿಸಿದರು. ಕಾರ್ಯಕ್ರಮದ ವೇದಿಕೆ, ಬೃಹತ್ ಶಾಮಿಯಾನ, ಸಭಿಕರ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರ ವಾಹನ ನಿಲುಗಡೆ, ಕುಡಿಯುವ ನೀರು, ಉಪಹಾರ, ಶೌಚಾಲಯ ಹಾಗೂ ತಾತ್ಕಾಲಿಕ ಆರೋಗ್ಯ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ಮಹದೇಶ್ವರ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ನಿರ್ಮಿಸಬೇಕಿರುವ ಹೆಲಿಪ್ಯಾಡ್ಗಾಗಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಸ್ಥಳ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಇಲಾಖೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೆರವೇರಿಸಲಿದ್ದಾರೆ. ಉಪಮುಖ್ಯಮಂತ್ರಿಗಳು ಹಾಗೂ ವಿವಿಧ ಇಲಾಖೆಗಳ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಯಳಂದೂರಿನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಆಸ್ಪತ್ರೆ, ಹಾಸ್ಟೆಲ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಸಂತೇಮರಹಳ್ಳಿಯಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಎಳನೀರು ಮಾರುಕಟ್ಟೆ, ಕೊಳ್ಳೇಗಾಲದಲ್ಲಿ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಮೊದಲ ಹಂತವಾಗಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ ಹಾಗೂ ಮುಡಿಗುಂಡ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ಡಿವೈಎಸ್ಪಿ ಮೋಹನ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ :ಕಾರ್ತಿಕ್ ಗೌಡ ಹನೂರು.

