ಸಮೀಕ್ಷೆಗೆ ರಾಜ್ಯಾದ್ಯಂತ 1.60 ಲಕ್ಷ ಶಿಕ್ಷಕರ ನಿಯೋಜನೆ: ಸಚಿವ ಎಸ್. ಮಧುಬಂಗಾರಪ್ಪ

Spread the love

ಶಿವಮೊಗ್ಗ: ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ರಾಜ್ಯಾದ್ಯಂತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಸಮೀಕ್ಷೆಗಾಗಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ತಂದಿದ್ದೇವೆ. ಈಗ ಹಿಂದುಳಿದ ವರ್ಗಗಳ ಸಮೀಕ್ಷೆಗೂ ಮುಂದಾಗಿದ್ದು, ಮತದಾರರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 35 ಸಾವಿರ ಶಿಕ್ಷಕರು
ಸರ್ಕಾರದ ಆದೇಶದಂತೆ ಸಮೀಕ್ಷೆಗೆ ಇಲಾಖೆಯಿಂದ ಎಲ್ಲ ರೀತಿಯ ತಯಾರಿ ನಡೆದಿದೆ. ರಾಜ್ಯದಲ್ಲಿ ಸುಮಾರು 1 ಕೋಟಿ ಮನೆಗಳಿದ್ದು, ಇದಕ್ಕಾಗಿ 1.60 ಲಕ್ಷ ಶಿಕ್ಷಕರನ್ನು ನಿಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಸುಮಾರು 5.50 ಲಕ್ಷ ಮನೆಗಳಿದ್ದು, ಇಲ್ಲಿ 35,000 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಜಿಲ್ಲಾಡಳಿತವು ಸಮೀಕ್ಷೆಯನ್ನು ಯಾವುದೇ ಸಮಸ್ಯೆಗಳಿಲ್ಲದೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಯಾವುದೇ ಸಮಸ್ಯೆ ಎದುರಾದರೆ, ಇಲಾಖೆಯ ಕಾರ್ಯದರ್ಶಿ ಅಥವಾ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರ ಗಮನಕ್ಕೆ ತಂದು ಸರಿಪಡಿಸಿಕೊಳ್ಳುವಂತೆ ತಿಳಿಸಿದರು.

ಸಮೀಕ್ಷೆಗೆ ಸಹಕರಿಸಲು ಮನವಿ
ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಮೀಕ್ಷೆಗೆ ಮುಂದಾಗಿದ್ದಾರೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯುವ ಈ ಸಮೀಕ್ಷೆಗೆ ಜನರು ಸಹಕರಿಸಬೇಕು ಮತ್ತು ಸರಿಯಾದ ಮಾಹಿತಿ ನೀಡಬೇಕು. ವಿರೋಧ ಪಕ್ಷಗಳ ಮಾತುಗಳಿಗೆ ಕಿವಿಕೊಡದೆ, ತಮ್ಮ ಹಕ್ಕುಗಳನ್ನು ಪಡೆಯಲು ಇರುವ ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಶಿಕ್ಷಕರು ನಿಗದಿತ ದಿನದೊಳಗೆ ಸಮೀಕ್ಷೆ ಪೂರ್ಣಗೊಳಿಸುವ ಭರವಸೆ ನೀಡಿದ್ದು, ಒಂದು ವೇಳೆ ವಿಳಂಬವಾದರೆ ಮುಂದಿನ ನಿರ್ಧಾರವನ್ನು ಮುಖ್ಯಮಂತ್ರಿ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ದಸರಾ ಉದ್ಘಾಟನೆ: ಜಾತ್ಯತೀತತೆಗೆ ಗೌರವ
ಬಾನು ಮುಸ್ತಾಕ್ ಅವರ ದಸರಾ ಉದ್ಘಾಟನೆ ಕುರಿತು ಮಾತನಾಡಿದ ಸಚಿವರು, ಸಂವಿಧಾನದ ಜಾತ್ಯತೀತ ಆಶಯದಂತೆ ಈ ನಿರ್ಧಾರವು ಅರ್ಥಪೂರ್ಣವಾಗಿದೆ. ಇದು ಸಂವಿಧಾನಕ್ಕೆ ಸಂದ ಗೌರವವಾಗಿದೆ. ಸುಪ್ರೀಂ ಕೋರ್ಟ್‌ನ ಈ ನಿರ್ಧಾರದಿಂದ ನಮ್ಮ ರಾಜ್ಯವು ಇಡೀ ದೇಶಕ್ಕೆ ಮಾದರಿಯಾಗುತ್ತಿದೆ ಎಂದರು.

ಸರ್ಕಾರ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಿದಾಗಿನಿಂದ ವಿರೋಧ ಪಕ್ಷದವರು ಕೋಮು ದೃಷ್ಟಿಯಿಂದ ಅವರನ್ನು ವಿರೋಧಿಸುತ್ತಾ ಬಂದಿದ್ದಾರೆ. ಇದನ್ನು ತಡೆಯಲು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಕೂಡ ಸಲ್ಲಿಸಿದ್ದರು. ಆದರೆ, ಅರ್ಜಿಗಳೆಲ್ಲಾ ವಜಾಗೊಂಡಿವೆ. ಸುಪ್ರೀಂ ಕೋರ್ಟ್ ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ಎತ್ತಿಹಿಡಿದು, ಬಾನು ಮುಸ್ತಾಕ್ ಅವರಿಗೆ ಇದ್ದ ಅಡೆತಡೆಗಳನ್ನು ತೆಗೆದುಹಾಕಿ ದಸರಾ ಉದ್ಘಾಟನೆಗೆ ಅವಕಾಶ ನೀಡಿದೆ ಎಂದು ಹೇಳಿದರು.

ಅತಿವೃಷ್ಟಿ ಪರಿಹಾರ: ₹80 ಕೋಟಿ ಮಂಜೂರು
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 83,000 ಎಕರೆ ಅಡಿಕೆ ಬೆಳೆ ನಾಶವಾಗಿದ್ದು, ಈ ಕುರಿತು ಜಿಲ್ಲಾಡಳಿತವು ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದೆ. ಜಿಲ್ಲೆಗೆ ₹80 ಕೋಟಿ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗಿದೆ ಮತ್ತು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *