11 ಲಕ್ಷ ಲಂಚ ಪ್ರಕರಣ: ಅಫಜಲಪುರ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

Spread the love

ಕಲಬುರಗಿ: ಏಳು ವರ್ಷಗಳ ಹಿಂದೆ ಇಡೀ ರಾಜ್ಯದ ಗಮನ ಸೆಳೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಮಧ್ಯವರ್ತಿ ಶಿವಾನಂದ ಜಮಖಂಡಿ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತಲಾ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಪ್ರಕರಣವು 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ನಡೆದಿತ್ತು. ಅಲ್ಲಿ ಗುತ್ತಿಗೆ ಆಧಾರದಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಅಂದಿನ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ, ಪ್ರಕರಣದಿಂದ ಪಾರು ಮಾಡಲು ₹11 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಮಧ್ಯವರ್ತಿ ಶಿವಾನಂದ ಜಮಖಂಡಿಗೆ ನೀಡುವಂತೆ ಸೂಚಿಸಿದ್ದಲ್ಲದೆ, ಲಂಚ ನೀಡದಿದ್ದರೆ ಕೆಲಸದಿಂದ ವಜಾಗೊಳಿಸುವ ಬೆದರಿಕೆಯನ್ನೂ ಹಾಕಿದ್ದರು.

ಲಂಚ ನೀಡಲು ನಿರಾಕರಿಸಿದ ಶಿವಲಿಂಗಯ್ಯ ಅವರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನದಂತೆ 2017ರ ಆಗಸ್ಟ್ 31ರಂದು ಶಿವಾನಂದ ಜಮಖಂಡಿಗೆ ಲಂಚದ ಹಣ ನೀಡುವ ವೇಳೆ ಪೂರ್ವಸಿದ್ಧತೆಯೊಂದಿಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಹಣದ ಸಮೇತ ಆತನನ್ನು ರಂಗೇಹಾತಾಗಿ ಬಂಧಿಸಿದ್ದರು. ತದನಂತರ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿಯನ್ನೂ ವಶಕ್ಕೆ ಪಡೆಯಲಾಗಿತ್ತು. ಅಂದಿನ ಲೋಕಾಯುಕ್ತ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಲೋಕಾಯುಕ್ತ ತನಿಖಾಧಿಕಾರಿ ಕೃಷ್ಣಪ್ಪ ಕಲ್ಲದೇವರ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠ ಅವರು ಸಾಕ್ಷ್ಯಾಧಾರಗಳೊಂದಿಗೆ ವಾದ ಮಂಡಿಸಿದ್ದರು. ಎಲ್ಲಾ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಇಬ್ಬರಿಗೂ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಇದೇ ಪ್ರಕರಣದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಶಶಿಕಲಾ ಪಾದಗಟ್ಟಿ ಅವರನ್ನು ಕಡ್ಡಾಯ ನಿವೃತ್ತಿಗೊಳಿಸಿತ್ತು. ಇದೀಗ ನ್ಯಾಯಾಲಯದ ಈ ತೀರ್ಪು ಸರ್ಕಾರಿ ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *