ಏ. 27 ರಂದು ಧಾರವಾಡ ಜಿಲ್ಲೆ ಹಾಗೂ ಕುಂದಗೋಳ ತಾ ಇಂಗಳಗಿ ಗ್ರಾಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ವಿವಿಧ ಆರೋಗ್ಯ ಕೇಂದ್ರಗಳ ಉದ್ಘಾಟನೆ

Spread the love

ಧಾರವಾಡ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧೆಡೆ ನೂತನ ಆರೋಗ್ಯ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

​ಸಚಿವರ ಅಂದಿನ ಪ್ರವಾಸವು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಲಸಿಕಾ ಕೇಂದ್ರವನ್ನು ಉದ್ಘಾಟಿಸುವ ಮೂಲಕ ಆರಂಭವಾಗಲಿದೆ. ತದನಂತರ 10:30 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಜಿಲ್ಲಾ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸಚಿವರು ಉದ್ಘಾಟಿಸಲಿದ್ದಾರೆ.

​ಬೆಳಿಗ್ಗೆ 11:30 ಗಂಟೆಗೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಸರ್ಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅಮ್ಮಿನಭಾವಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಸಚಿವರು ಉದ್ಘಾಟಿಸಿ, ನಂತರ ಅಲ್ಲಿ ಏರ್ಪಡಿಸಲಾಗಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

​ಮಧ್ಯಾಹ್ನ 2:30 ಗಂಟೆಗೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮಕ್ಕೆ ಭೇಟಿ ನೀಡಲಿರುವ ದಿನೇಶ್ ಗುಂಡೂರಾವ್ ಅವರು, ಅಲ್ಲಿನ ಇಂಗಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಈ ಎಲ್ಲಾ ನೂತನ ಕೇಂದ್ರಗಳು ಮಹತ್ವದ ಪಾತ್ರ ವಹಿಸಲಿವೆ.

Leave a Reply

Your email address will not be published. Required fields are marked *