
ಭಟ್ಕಳ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಸಂಭವಿಸಿದ ದಾರುಣ ಘಟನೆಗೆ ಎಂಟು ಮಂದಿ ನೀರುಪಾಲಾಗಿದ್ದಾರೆ. ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38) ಹಾಗೂ ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಮೃತದೇಹಗಳು ಅಳ್ವೆಕೋಡಿ ಪ್ರದೇಶದಲ್ಲಿ ಪತ್ತೆಯಾಗಿವೆ.

ಕಪ್ಪೆ ಚಿಪ್ಪು ಆರಿಸಲು ಹೊಳೆಗೆ ಇಳಿದಿದ್ದವರು ಪರಸ್ಪರ ಕೈ ಹಿಡಿದು ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಪ್ರವಾಹದಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಸಮುದ್ರದ ಅಲೆಗಳ ಅಬ್ಬರದಿಂದ ನೀರಿನ ಮಟ್ಟವೂ ಏರಿಕೆಯಾಗಿತ್ತು. ಈ ಕಾರಣದಿಂದ ಗುಂಪಿನವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ನಾಗರತ್ನಾ ಹಾಗೂ ಮಹಾದೇವಿ ಎಂಬ ಇಬ್ಬರು ಅಪಾಯದಿಂದ ಪಾರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಕಣ್ಮರೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಟ್ಕಳ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

