
ನವಲಗುಂದ: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂದು ನವಲಗುಂದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್.ಎಚ್. ಕೋನರಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಹಾಗೂ ಬಿ.ಎ. ಮತ್ತು ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಶ್ರಮ ಹಾಗೂ ಪ್ರಾಮಾಣಿಕತೆ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಗುರಿ ಸಾಧನೆಗೆ ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಧಾರವಾಡದ ಸ.ಪ್ರ.ದ.ಮ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಖ್ಯಾತ ಗಾಯಕ ಡಾ. ಎಸ್.ಬಿ. ತಟಗಾರ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ತಿಳಿಸಿದರು. ಇದೇ ವೇಳೆ ಅವರು ಗಾಯನ ಕಾರ್ಯಕ್ರಮವೂ ನಡೆಸಿಕೊಟ್ಟರು.
ಪ್ರಾಂಶುಪಾಲ ಡಾ. ಎಂ.ಬಿ. ಬಾಗಡಿ ಮಾತನಾಡಿ, ಕಾಲೇಜಿನ ಸಿಬ್ಬಂದಿಯ ಸಮರ್ಪಿತ ಸೇವೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಕಾಲೇಜಿನಿಂದ ಹೊರಹೊಮ್ಮುತ್ತಿರುವ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲೂ ಸಂಸ್ಥೆಯ ಹೆಸರನ್ನು ಎತ್ತಿಹಿಡಿಯಬೇಕು ಎಂದು ಕರೆ ನೀಡಿದರು.
ಐಕ್ಯೂಎಸಿ ಸಹ ಸಂಚಾಲಕ ಡಾ. ಪ್ರಸನ್ನ ಪಂಢರಿ ವಾರ್ಷಿಕ ವರದಿ ಮಂಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಡಾ. ಸಂತೋಷ ಹುಬ್ಬಳ್ಳಿ ಸ್ವಾಗತಿಸಿದರು. ಡಾ. ಐ.ಬಿ. ಸಾತಿಹಾಳ ಅತಿಥಿ ಪರಿಚಯಿಸಿದರು. ಶ್ರೀಮತಿ ಚೈತ್ರಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಜಾತಾ ಬರದೂರ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

