
ಧಾರವಾಡ, ಜೂ.11: ಸ್ವಚ್ಛತಾ ಕಾರ್ಮಿಕರು ಮತ್ತು ಪೌರಕಾರ್ಮಿಕರಿಗೆ ವೇತನ, ಇಎಸ್ಐ, ಪಿಎಫ್, ಆರೋಗ್ಯ ವಿಮೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು ಮತ್ತು ಪೌರಕಾರ್ಮಿಕರೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಂವಾದ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪ್ರದೇಶದಲ್ಲಿ 82 ವಾರ್ಡ್ಗಳಿದ್ದು, ಪ್ರತಿಯೊಂದು ವಾರ್ಡ್ಗೆ ಒಂದು ಶೌಚಾಲಯ ನಿರ್ಮಾಣವಾಗುವಂತೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇರುವ ಶೌಚಾಲಯಗಳ ನಿರ್ವಹಣೆಗೆ ಸಂಬಂಧಿಸಿದ ವಲಯ ಆಯುಕ್ತರು ಹೆಚ್ಚಿನ ಗಮನ ಹರಿಸಬೇಕು. ಪೌರಕಾರ್ಮಿಕರಿಗೆ ಗುಣಮಟ್ಟದ ಉಪಹಾರ, ಕಾಲಕಾಲಕ್ಕೆ ವೇತನ, ಇಎಸ್ಐ, ಪಿಎಫ್ ಹಾಗೂ ಆರೋಗ್ಯ ವಿಮೆ ಸೌಲಭ್ಯಗಳನ್ನು ಒದಗಿಸಬೇಕು. ಸೇವಾನಿರತ ಕಾರ್ಮಿಕರು ಮೃತಪಟ್ಟಲ್ಲಿ ರೂ.10 ಲಕ್ಷ ಪರಿಹಾರ ವಿತರಿಸುವ ವ್ಯವಸ್ಥೆ ಜಾರಿಯಾಗಬೇಕು ಎಂದು ಹೇಳಿದರು.

ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಹಾಗೂ ಸಮವಸ್ತ್ರಗಳನ್ನು ವಿತರಿಸುವುದರ ಜೊತೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮತ್ತು ವರ್ಷಕ್ಕೊಮ್ಮೆ ಮಾಸ್ಟರ್ ಹೆಲ್ತ್ ಚೆಕ್ಅಪ್ ನಡೆಸಬೇಕು. ಅವರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನಿವೇಶನಗಳನ್ನು ನೀಡಬೇಕು ಹಾಗೂ ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದರು.
ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ವೇತನಕ್ಕೆ ಸಂಬಂಧಿಸಿದ ಹಲವು ದೂರುಗಳು ಆಯೋಗದ ಗಮನಕ್ಕೆ ಬಂದಿದ್ದು, ಅವುಗಳನ್ನು ತ್ವರಿತವಾಗಿ ಪರಿಹರಿಸಬೇಕು. ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳ ಹಂಚಿಕೆ ಮಾಡಬೇಕು ಹಾಗೂ ಹೊರಗುತ್ತಿಗೆ ನೌಕರರ ವೇತನವನ್ನು ಯಾವುದೇ ಕಾರಣಕ್ಕೂ ತಡೆಹಿಡಿಯಬಾರದು. ಕಾರ್ಮಿಕರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ಸ್ಯಾಲರಿ ಪ್ಯಾಕೇಜ್ ಸೌಲಭ್ಯ ಒದಗಿಸಬೇಕು ಎಂದು ಹೇಳಿದರು.
ಮ್ಯಾನ್ಯುವಲ್ ಸ್ವಚ್ಛತಾ ಪದ್ಧತಿಯನ್ನು ಯಾವುದೇ ಕಾರಣಕ್ಕೂ ಅನುಸರಿಸಬಾರದು. ಒಂದು ವೇಳೆ ಮ್ಯಾನ್ಯುವಲ್ ಸ್ವಚ್ಛತೆ ನಡೆಸಿಸಿರುವ ಕುರಿತು ದೂರುಗಳು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ಸ್ವಚ್ಛತಾಗಾರರಿಗೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸಿದ ಬಳಿಕವೇ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಸೂಚಿಸಿದರು.
ಕಾರ್ಮಿಕರಿಗಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಮಾಹಿತಿ ಫಲಕಗಳನ್ನು ಅಳವಡಿಸಬೇಕು ಹಾಗೂ ಮಾಹಿತಿ ಕರಪತ್ರಗಳನ್ನು ವಿತರಿಸಬೇಕು. ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ಕನಿಷ್ಠ ವೇತನ ಖಚಿತಪಡಿಸಬೇಕು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವೇತನ ಸಮಸ್ಯೆ ಪರಿಹರಿಸಬೇಕು. ಪಿಎಫ್ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ವಸತಿ ನಿಲಯಗಳಲ್ಲಿರುವ ಸ್ವಚ್ಛತಾಗಾರರು ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸಿ ಸ್ವಚ್ಛತಾ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯ ಕಾರ್ಮಿಕರಿಗೆ ಸಮವಸ್ತ್ರಗಳನ್ನು ವಿತರಿಸಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿ, ಪ್ರತಿ ಮೂರು ತಿಂಗಳಿಗೊಮ್ಮೆ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಶಂಕರ ಹಾಗೂ ಮಹಾದೇವಸ್ವಾಮಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿ ವಂದಿಸಿದರು.

