ಧಾರವಾಡದಲ್ಲಿ ಜೂ.14ರಂದು 4ನೇ ವಲಯ ಕಾನೂನು ಕಾರ್ಯಾಗಾರ: 6 ಜಿಲ್ಲೆಗಳ 1,200ಕ್ಕೂ ಅಧಿಕ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಜ್ಜು

Spread the love

ಧಾರವಾಡ, ಜೂ.12: ಕಾನೂನು ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆ, ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳು ಹಾಗೂ ಕಾನೂನು ಶಿಕ್ಷಣದ ಪ್ರಾಯೋಗಿಕ ಅಂಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಫ್ರಾಮ್ ಕ್ಲಾಸ್ ರೂಮ್ ಟು ಕೋರ್ಟ್ ರೂಮ್” ವಿಷಯದಡಿ 4ನೇ ವಲಯ ಕಾರ್ಯಾಗಾರವನ್ನು ಜೂನ್ 14ರಂದು ಧಾರವಾಡದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ ತಿಳಿಸಿದ್ದಾರೆ.

ಗುರುವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜೂನ್ 14ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅನು ಶಿವರಾಮ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಯು. ಕೃಷ್ಣರಾಜ ಅಧ್ಯಕ್ಷತೆ ವಹಿಸಲಿದ್ದು, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಸುನೀಲ್ ದತ್ ಯಾದವ ಹಾಗೂ ಎಚ್.ಪಿ. ಸಂದೇಶ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. (ಪ್ರೊ.) ಸಿ. ಬಸವರಾಜು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ-1987ರ ಉದ್ದೇಶಗಳು, ಕಾನೂನು ಕಾಲೇಜುಗಳಲ್ಲಿ ಕಾನೂನು ಸೇವಾ ಚಿಕಿತ್ಸಾಲಯಗಳ ಪಾತ್ರ, ಕಾನೂನು ಸೇವಾ ಶಿಬಿರಗಳು, ಜನಸಂಪರ್ಕ ಕಾರ್ಯಕ್ರಮಗಳು ಹಾಗೂ ಕಾನೂನು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಗಳ ಕುರಿತು ತಜ್ಞರಿಂದ ಉಪನ್ಯಾಸಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಈ ಹಿಂದೆ ಮೈಸೂರು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಇದೇ ಮಾದರಿಯ ಕಾರ್ಯಾಗಾರಗಳು ಯಶಸ್ವಿಯಾಗಿ ನಡೆದಿದ್ದು, ಇದೀಗ ಧಾರವಾಡದಲ್ಲಿ ನಾಲ್ಕನೇ ವಲಯ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಈಗಾಗಲೇ ಸುಮಾರು 1,200 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಉತ್ತರ ಕನ್ನಡ (ಕಾರವಾರ), ಹಾವೇರಿ, ಗದಗ ಸೇರಿದಂತೆ ಆರು ಜಿಲ್ಲೆಗಳ ವಿವಿಧ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಎನ್.ವಿ. ವಿಜಯ ಹೇಳಿದರು.

ಕಾರ್ಯಾಗಾರವನ್ನು ಯೂಟ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಕಾನೂನುಗಳ ಬಗ್ಗೆ ಸಮಗ್ರ ಅರಿವು ಮೂಡಿಸುವುದು ಹಾಗೂ ಸಾರ್ವಜನಿಕರು ತಮ್ಮ ಹಕ್ಕುಗಳ ರಕ್ಷಣೆಗೆ ಕಾನೂನುಗಳನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂಬ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಮತ್ತು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ನಾಗರಾಜಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *