
ಕುಂದಗೋಳ,: ಸರ್ಕಾರ ಯಾವುದೇ ಕಾರಣಕ್ಕೂ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ನಮ್ಮೂರಿನ ಶಾಲೆಗಳನ್ನು ಉಳಿಸಿಕೊಳ್ಳಲು ಅಗತ್ಯವಿದ್ದರೆ ಜೀವವನ್ನೇ ಪಣಕ್ಕಿಡುತ್ತೇವೆ ಎಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಗ್ರಾಮಸ್ಥರು ಹಾಗೂ ಪೋಷಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಶಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ.1 ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ.3 ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ವಿಲೀನಗೊಳಿಸಿ ಮುಚ್ಚಲಾಗುತ್ತಿದೆ ಎಂದು ಆರೋಪಿಸಿ, ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದವರು ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿ, ಯಾವುದೇ ಕಾರಣಕ್ಕೂ ಗ್ರಾಮದ ಶಾಲೆಗಳನ್ನು ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಭುವನ ಬಳ್ಳಾರಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಸಂಶಿಯ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಪರಿವರ್ತಿಸಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ.1 ಹಾಗೂ ನಂ.3 ಅನ್ನು ಅದಕ್ಕೆ ವಿಲೀನಗೊಳಿಸಲಾಗುತ್ತಿದೆ. ಈ ಕ್ರಮದಿಂದ ಬಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗಲಿದೆ ಎಂದು ಅವರು ಹೇಳಿದರು.

ಸಮುದಾಯದ ಮಧ್ಯದಲ್ಲಿರುವ ಶಾಲೆಗಳನ್ನು ಮುಚ್ಚಿ ಮಕ್ಕಳನ್ನು ದೂರದ ಶಾಲೆಗಳಿಗೆ ಕಳುಹಿಸುವುದು ಶಿಕ್ಷಣದ ಹಕ್ಕಿಗೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸರ್ಕಾರ ಹೇಳುತ್ತಿದ್ದರೂ, ಅದರ ಹೊಣೆಗಾರಿಕೆಯನ್ನು ಎಸ್ಡಿಎಂಸಿ ಮೇಲೆ ಹೊರಿಸಲಾಗುತ್ತಿದೆ ಎಂದು ಟೀಕಿಸಿದರು.
ಮ್ಯಾಗ್ನೆಟ್ ಶಾಲೆಗಳ ನಿರ್ವಹಣೆಯನ್ನು ಹೊರಗುತ್ತಿಗೆ ಆಧಾರದಲ್ಲಿ ನಡೆಸುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಹಂತಹಂತವಾಗಿ ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ದೂರವಾಗುವ ಅಪಾಯವಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಧಾರವಾಡ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಗುರುಪಾದಪ್ಪ ಬಂಕದ್, ಶಂಶುದೀನ್ ಕುರಟ್ಟಿ, ಮಹದೇವಪ್ಪ ಪೂಜಾರ, ನಿಂಗನಗೌಡ, ಶಿವಾನಂದ ಹೊಸಮನಿ, ಬಸಪ್ಪ, ಅನ್ನಕ್ಕ, ಲಕ್ಷ್ಮೀ ಜಮಖಂಡಿ, ಮಂಜುನಾಥ ಕುರುಬರ, ರೇಣುಕಾ ಕರೆಸಣ್ಣವರ, ಗಣೇಶ್ ಸುರುಪುರ ಸೇರಿದಂತೆ ಗ್ರಾಮಸ್ಥರು ಹಾಗೂ ಪೋಷಕರು ಭಾಗವಹಿಸಿ ಸರ್ಕಾರದ ಕ್ರಮವನ್ನು ಖಂಡಿಸಿದರು.

