
ವರದಿ: ಕಾರ್ತಿಕ್ ಗೌಡ, ಹನೂರ
ಚಾಮರಾಜನಗರ: ಮಲೆ ಮಹದೇಶ್ವರ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್ಆರ್ಟಿಸಿ ಬಸ್ನ ಟೈರ್ ಸಿಡಿದ ಪರಿಣಾಮ ಸೋಮವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಚಾಮರಾಜನಗರದ ಕುದೇರು ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ಪ್ರಕಾಶ್ (51) ಹಾಗೂ ಕೊಳ್ಳೇಗಾಲ ಪಟ್ಟಣದ ನಿವಾಸಿ, ಒಂದು ತಿಂಗಳ ಹಿಂದೆ ನಿವೃತ್ತಿ ಹೊಂದಿದ್ದ ಶಿಕ್ಷಕಿ ಪುಟ್ಟ ನಂಜಮ್ಮ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ನಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಲ್ಲಿ 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಕೊಳ್ಳೇಗಾಲ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡ ಹಲವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಕೊಳ್ಳೇಗಾಲ ಡಿವೈಎಸ್ಪಿ ತಿಳಿಸಿದ್ದಾರೆ.

