ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಿಎಂ ಕರೆ: ಮಾದಕ ವಸ್ತುಗಳ ಬಗ್ಗೆ ಮಾಹಿತಿ ನೀಡಿದವರಿಗೆ ವಿಶೇಷ ಬಹುಮಾನ

Spread the love

ಬೆಂಗಳೂರು: ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಣೆ ಕುರಿತು ಗುಪ್ತ ಮಾಹಿತಿ ನೀಡುವ ಸಾರ್ವಜನಿಕರು ಮತ್ತು ಪೋಷಕರಿಗೆ ಪೊಲೀಸ್ ಇಲಾಖೆಯಿಂದ ಬಹುಮಾನ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ–2026’ ಕಾರ್ಯಕ್ರಮವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.

“ಚಕ್ರವ್ಯೂಹವನ್ನು ಭೇದಿಸಿ, ಸಂಘಟಿತ ಅಪರಾಧವನ್ನು ತಡೆಯಿರಿ” ಎಂಬ ಧ್ಯೇಯವಾಕ್ಯದೊಂದಿಗೆ ಯುವ ಪೀಳಿಗೆಯನ್ನು ಹಾಳುಮಾಡುತ್ತಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ರಾಜ್ಯ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು. ಕೇವಲ ಕಾನೂನು ಜಾರಿ ಮೂಲಕವೇ ಮಾದಕ ವಸ್ತುಗಳ ನಿಯಂತ್ರಣ ಸಾಧ್ಯವಿಲ್ಲ. ಪೋಷಕರು, ಶಿಕ್ಷಕರು ಹಾಗೂ ಪ್ರತಿಯೊಬ್ಬ ನಾಗರಿಕರು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಾದಕ ವಸ್ತುಗಳ ವಿರುದ್ಧದ ಹೋರಾಟದಿಂದ ಕುಟುಂಬ, ಸಮಾಜ, ಪರಿಸರ ಹಾಗೂ ರಾಜ್ಯದ ಸುರಕ್ಷತೆ ಮತ್ತು ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಸಾರ್ವಜನಿಕರು ನಿರ್ಭಯವಾಗಿ ಮಾಹಿತಿ ನೀಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್. ಹಿತೇಂದ್ರ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *