ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು, ರಸಗೊಬ್ಬರ ಹಾಗೂ ಮೇವಿನ ಕೊರತೆ ಇರುವುದಿಲ್ಲ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ

Spread the love

ಧಾರವಾಡ , ಜು.6: ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು, ರಸಗೊಬ್ಬರ ಹಾಗೂ ಮೇವಿನ ಯಾವುದೇ ಕೊರತೆ ಉಂಟಾಗುವುದಿಲ್ಲ. ಎಲ್ಲಿಯಾದರೂ ಕೊರತೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಕ್ಷಣ ವರದಿ ಸಲ್ಲಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೂಚಿಸಿದರು.

ಸೋಮವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಕೆಲಸಕ್ಕಾಗಿ ಬರುವ ಕಾರ್ಮಿಕರಿಗೆ ಅಗತ್ಯ ಸುರಕ್ಷತೆ ಒದಗಿಸಬೇಕು. ಕಾರ್ಮಿಕರ ಮೇಲೆ ಅನಗತ್ಯ ಒತ್ತಡ ಹಾಕದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು. ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕವನ್ನು ಮುನ್ನೆಚ್ಚರಿಕೆಯಾಗಿ ಕಡಿತಗೊಳಿಸುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮಾತನಾಡಿ, ಜಿಲ್ಲೆಯಲ್ಲಿ ಹೆಸರು ಹಾಗೂ ಸೋಯಾಅವರೆ ಬಿತ್ತನೆ ಉತ್ತಮವಾಗಿದ್ದು, ಬೆಳೆಗಳಿಗೆ ಅಗತ್ಯವಿರುವಷ್ಟು ಮಳೆಯಾಗಿದೆ. ಸದ್ಯ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಅಧಿಕ ಮಳೆಯಾದರೆ ಬೆಳೆ ಹಾನಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಜೂನ್ 1ರಿಂದ ಜುಲೈ 6ರವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 150.3 ಮಿ.ಮೀ. ಆಗಬೇಕಿದ್ದರೆ, 120.1 ಮಿ.ಮೀ. ಮಳೆಯಾಗಿದ್ದು, 27 ಮಿ.ಮೀ. ಮಳೆ ಕೊರತೆ ದಾಖಲಾಗಿದೆ. 2026ರ ನೈರುತ್ಯ ಮುಂಗಾರು ಅವಧಿಯಲ್ಲಿ ಜಿಲ್ಲೆಯ 8 ತಾಲೂಕುಗಳ ಪೈಕಿ ಕುಂದಗೋಳ ತಾಲೂಕಿನಲ್ಲಿ ಮಾತ್ರ ಅಧಿಕ ಮಳೆಯಾಗಿದ್ದು, ಉಳಿದ 7 ತಾಲೂಕುಗಳಲ್ಲಿ ಸಾಧಾರಣ ಮಳೆ ಕೊರತೆ ಕಂಡುಬಂದಿದೆ ಎಂದು ಹೇಳಿದರು.

ಮುಂಗಾರು ಹಂಗಾಮಿನಲ್ಲಿ 2,82,677 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದ್ದು, ಈವರೆಗೆ 2,55,191 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು, ಶೇ.90.28ರಷ್ಟು ಗುರಿ ಸಾಧಿಸಲಾಗಿದೆ. ಪ್ರಮುಖವಾಗಿ ಮುಸುಕಿನ ಜೋಳ, ಭತ್ತ, ಉದ್ದು, ಹೆಸರು, ಶೇಂಗಾ, ಸೋಯಾಅವರೆ, ಹತ್ತಿ ಹಾಗೂ ಕಬ್ಬು ಬೆಳೆಗಳನ್ನು ಬಿತ್ತನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2026-27ನೇ ಸಾಲಿನ ಮುಂಗಾರು ಬೆಳೆಗಳಿಗೆ ವಿವಿಧ ವಿಧದ ಒಟ್ಟು 54,648 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಇದುವರೆಗೆ 28,586 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದೆ. ಪ್ರಸ್ತುತ 27,832 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಂಚಿಕೆಯಂತೆ ಉಳಿದ ರಸಗೊಬ್ಬರವೂ ಸಕಾಲದಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗಾಗಿ ಸೋಯಾಅವರೆ, ಮುಸುಕಿನ ಜೋಳ, ಶೇಂಗಾ, ಹೆಸರು, ಉದ್ದು, ಭತ್ತ ಹಾಗೂ ತೊಗರಿ ಸೇರಿ ಒಟ್ಟು 17,703 ಕ್ವಿಂಟಾಲ್ ಬಿತ್ತನೆ ಬೀಜ ಪೂರೈಕೆಯಾಗಿದ್ದು, ಇದರಲ್ಲಿ 15,838 ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸಲಾಗಿದೆ. ಇನ್ನೂ 1,631 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಉಳಿದಿದೆ ಎಂದು ಹೇಳಿದರು.

ಧಾರವಾಡ, ಹುಬ್ಬಳ್ಳಿ ಹಾಗೂ ಕಲಘಟಗಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಧಾರವಾಡ ತಾಲೂಕಿನ ಹೊಸಟ್ಟಿ, ಮಂಡಿಹಾಳ, ಬೇಲೂರ, ಮುಗದ, ಮನಗುಂಡಿ, ಲೋಕೂರು, ನಿಗದಿ, ಬೊಗೂರು, ವೆಂಕಟಾಪೂರ, ಹೊಸ್ವಾಳ, ಹುಬ್ಬಳ್ಳಿ ತಾಲೂಕಿನ ನೂಲ್ವಿ, ಅದರಗುಂಚಿ, ಕುರ್ಡಿಕೆರೆ, ಛಬ್ಬಿ ಹಾಗೂ ಕಲಘಟಗಿ ತಾಲೂಕಿನ ನೆಲ್ಲಹರವಿ ತಾಂಡ, ಬಿ.ಹುಲಿಕಟ್ಟಿ, ಸಂಗಮೇಶ್ವರ, ಜುಂಜನಬೈಲ್, ಶಿಂಗನಹಳ್ಳಿ, ಬಮ್ಮಿಗಟ್ಟಿ ಮತ್ತು ಕಂದಲಿ ಸೇರಿದಂತೆ ಒಟ್ಟು 20 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 100 ವಾರ್ಡ್‌ಗಳಲ್ಲಿ ಯಾವುದೇ ವಾರ್ಡ್‌ಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿಲ್ಲ. 80 ವಾರ್ಡ್‌ಗಳಿಗೆ ಪ್ರತಿದಿನ ಹಾಗೂ ಉಳಿದ 20 ವಾರ್ಡ್‌ಗಳಿಗೆ ಎರಡು ಅಥವಾ ಮೂರು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಐದು ನಗರ ಸ್ಥಳೀಯ ಸಂಸ್ಥೆಗಳ ಕೆರೆಗಳಲ್ಲಿ ಕುಡಿಯುವ ನೀರಿನ ಸಂಗ್ರಹ ಸಮರ್ಪಕವಾಗಿರುವುದರಿಂದ ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 82 ವಾರ್ಡ್‌ಗಳಲ್ಲಿ 13 ವಾರ್ಡ್‌ಗಳಿಗೆ 24×7 ನೀರು ಪೂರೈಕೆ ಮಾಡಲಾಗುತ್ತಿದ್ದು, ಉಳಿದ ವಾರ್ಡ್‌ಗಳಿಗೆ ಎರಡು ರಿಂದ ಏಳು ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 1,84,037 ದನ ಹಾಗೂ ಎಮ್ಮೆಗಳು ಮತ್ತು 1,83,524 ಕುರಿ ಹಾಗೂ ಮೇಕೆಗಳಿದ್ದು, ಪ್ರಸ್ತುತ 4,44,310.146 ಟನ್ ಮೇವು ಲಭ್ಯವಿದೆ. ಈ ಮೇವು ಮುಂದಿನ 52 ವಾರಗಳಿಗೆ ಸಾಕಾಗುವಷ್ಟು ದಾಸ್ತಾನು ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ 7 ಮೇವು ಬ್ಯಾಂಕ್‌ಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಪೂರ್ವ ಮುಂಗಾರು ಅವಧಿಯಲ್ಲಿ ಒಂದು ಮನೆ ಸಂಪೂರ್ಣ ಹಾನಿಗೊಳಗಾಗಿದ್ದು, ₹1.20 ಲಕ್ಷ ಪರಿಹಾರ ವಿತರಿಸಲಾಗಿದೆ. ಐದು ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಒಟ್ಟಾರೆ ಆರು ಮನೆಗಳಿಗೆ ₹1.52 ಲಕ್ಷ ಪರಿಹಾರ ವಿತರಿಸಲಾಗಿದೆ. ಧಾರವಾಡ ತಾಲೂಕಿನ ಕವಲಗೇರಿಯಲ್ಲಿ ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗಿದೆ. ಜೂನ್ 1ರಿಂದ ಜುಲೈ 4ರವರೆಗೆ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ತಿಳಿಸಿದರು.

ಬೆಳೆ ಹಾನಿ ಕುರಿತು ಮಾರ್ಚ್ ತಿಂಗಳಲ್ಲಿ 1,979.45 ಹೆಕ್ಟೇರ್ ಪ್ರದೇಶಕ್ಕೆ ಸಂಬಂಧಿಸಿದಂತೆ 2,529 ರೈತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 1,038.45 ಹೆಕ್ಟೇರ್ ಪ್ರದೇಶಕ್ಕೆ ಸಂಬಂಧಿಸಿದಂತೆ 1,539 ರೈತರ ಮಾಹಿತಿಯನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಅದರಲ್ಲಿ 567 ರೈತರು ಫ್ರೂಟ್ಸ್ ಐಡಿ ಹೊಂದಿಲ್ಲ ಹಾಗೂ 423 ರೈತರಲ್ಲಿ ಬೆಳೆ ಹೊಂದಾಣಿಕೆ ಇಲ್ಲದಿರುವುದರಿಂದ ಒಟ್ಟು 990 ಅರ್ಜಿಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.

ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಪೊಲೀಸ್ ಇಲಾಖೆ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *