
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಇಂದು ಮುಂಜಾನೆ ಲಾರಿ ಹಾಗೂ ತೂಫಾನ್ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜೀವ್/ಸಂಜಯ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಇವರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹಾಗೂ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28) ಅವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ (ಕೆಎ-19 ಎಎ-5920) ವಾಹನದಲ್ಲಿ ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ಧಾರವಾಡ ಮೂಲದವರಾಗಿದ್ದು, ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿದ್ದ ವೇಳೆ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಎದುರಿನಿಂದ ಬಂದ ಲಾರಿ (ಕೆಎ-22 ಎಎ-1008)ಗೆ ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

