ಹನೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಕಾರ್ಯಕ್ರಮ

Spread the love

ವರದಿ: ಕಾರ್ತಿಕ್ ಗೌಡ, ಹನೂರ

ಹನೂರು: ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗುತ್ತಿರುವುದು ಸಮಾಜಕ್ಕೆ ದೊಡ್ಡ ಅಪಾಯವಾಗಿದ್ದು, ಇದು ಸಮಾಜಘಾತುಕ ಶಕ್ತಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೊಲೀಸ್ ವೃತ್ತ ನಿರೀಕ್ಷಕ ಆನಂದಮೂರ್ತಿ ಹೇಳಿದರು.

ಹನೂರು ಪೊಲೀಸ್ ಠಾಣೆಯ ವತಿಯಿಂದ ತಾಲೂಕಿನ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ಯುವಜನರು ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಬಲಿಯಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಮಾದಕ ವಸ್ತುಗಳ ಬಳಕೆಯಿಂದ ದೂರವಿದ್ದು, ‘ಮಾದಕ ವಸ್ತು ಮುಕ್ತ ಸಮಾಜ’ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞಾ ವಿಧಿಯನ್ನೂ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *