
ನವದೆಹಲಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಭಾನುವಾರ ನವದೆಹಲಿಯ ಕೇಂದ್ರ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇಶದ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಪೂರ್ಣ ನಿಷ್ಠೆ ಹಾಗೂ ವಿನಮ್ರತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಲ್ಹಾದ ಜೋಶಿ, ತಮ್ಮ ಮೇಲೆ ಅಪಾರ ನಂಬಿಕೆ ಇಟ್ಟು ಕೇಂದ್ರ ಶಿಕ್ಷಣ ಸಚಿವರಂತಹ ಮಹತ್ವದ ಜವಾಬ್ದಾರಿಯನ್ನು ವಹಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಈ ಜವಾಬ್ದಾರಿಯನ್ನು ಅತ್ಯಂತ ವಿನಮ್ರತೆ, ಕರ್ತವ್ಯಪ್ರಜ್ಞೆ ಹಾಗೂ ನಿಷ್ಠೆಯಿಂದ ಸ್ವೀಕರಿಸುತ್ತಿದ್ದೇನೆ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಳೆದ ಹಲವು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆಗಳು ಜಾರಿಯಾಗಿದ್ದು, ಆ ಪರಂಪರೆಯನ್ನು ಮುಂದುವರಿಸಿಕೊಂಡು ದೇಶದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಲ್ಹಾದ ಜೋಶಿ ಹೇಳಿದರು.

