ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ: ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಿಸಿ, ಅಂಗನವಾಡಿ ಹಾಗೂ ರಸಗೊಬ್ಬರ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿ – ಸಚಿವ ಸಂತೋಷ ಲಾಡ್

Spread the love

ಧಾರವಾಡ: ರೈತರಿಗೆ ಸರ್ಕಾರದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಅಂಗನವಾಡಿ ಕೇಂದ್ರಗಳು ಹಾಗೂ ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ ಲಾಡ್ ಸೂಚಿಸಿದರು. ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನಡೆದ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಅಗತ್ಯ ಮಾಹಿತಿಯ ಫಲಕಗಳನ್ನು ಅಳವಡಿಸಬೇಕು. ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡದೆ, ನಿಗದಿತ ದರದಲ್ಲಿಯೇ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಸೂಚಿಸಿದರು. ಕಲಘಟಗಿ ತಾಲೂಕಿನಲ್ಲಿ ಶೇ.85ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಉಳಿದ ಶೇ.15ರಷ್ಟು ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಬೆಳೆ ದರ್ಶಕ ಆ್ಯಪ್‌ನಲ್ಲಿ ದಾಖಲಾಗುವ ಮಾಹಿತಿಯು ನಿಖರವಾಗಿರಬೇಕು. ರೈತರು ತಪ್ಪು ಮಾಹಿತಿ ಕಂಡುಬಂದಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಕುರಿತು ರೈತರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈತರು ಅಡಿಕೆ ಬೆಳೆ ಬೆಳೆಯಲು ಮುಂದಾಗಬೇಕು. ಅಡಿಕೆ ತೋಟಗಳ ನಡುವೆ ಬಾಳೆ ಸೇರಿದಂತೆ ಕಬ್ಬು, ಗೋವಿನಜೋಳ, ಕಾಳು ಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಉತ್ತೇಜಿಸಬೇಕು ಹಾಗೂ ಈ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಹಂಚಬೇಕು ಎಂದು ಸಚಿವರು ಹೇಳಿದರು. ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಕಲಘಟಗಿ ತಾಲೂಕಿನ 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಈಗಾಗಲೇ 11 ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ. ಅವುಗಳಲ್ಲಿ 8 ಬೋರ್‌ವೆಲ್‌ಗಳಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, ಉಳಿದ ಗ್ರಾಮಗಳಿಗೂ ಶೀಘ್ರ ನೀರು ಒದಗಿಸಲಾಗುವುದು ಎಂದು ತಿಳಿಸಿದರು. ಕಲಘಟಗಿ ಪಟ್ಟಣಕ್ಕೆ ಬೆಣಚಿಕೆರೆಯಿಂದ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಪೈಪ್‌ಲೈನ್ ಸೋರಿಕೆ ಕುರಿತು ಬಂದಿರುವ ದೂರುಗಳನ್ನು ತಕ್ಷಣ ಪರಿಹರಿಸುವಂತೆ ಸೂಚಿಸಿದರು.

ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ದುರಸ್ತಿಗೆ ಅಧಿಕಾರಿಗಳು ಕ್ರಮವಹಿಸಬೇಕು. ಬೀಳುವ ಹಂತದಲ್ಲಿರುವ ಕಟ್ಟಡಗಳ ಮಾಹಿತಿ ಸಂಗ್ರಹಿಸಿ, ಅಂತಹ ಕಟ್ಟಡಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬಾರದು ಎಂದರು. ಈ ಹಿಂದೆ ಕಲಘಟಗಿ ತಾಲೂಕಿನ ಸುಮಾರು 140 ಶಾಲೆಗಳು ಹಾಗೂ 22 ಅಂಗನವಾಡಿಗಳಿಗೆ ಮೇಲ್ಚಾವಣಿಗೆ ತಗಡು ಅಳವಡಿಸಲು ಸೂಚನೆ ನೀಡಲಾಗಿತ್ತು. ತಾಲೂಕು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.98.63 ಫಲಿತಾಂಶ ದಾಖಲಿಸಿದ್ದು, 16 ಶಾಲೆಗಳು ಶೇ.100 ಫಲಿತಾಂಶ ಸಾಧಿಸಿವೆ. ಶಾಲಾ ಮಕ್ಕಳ ಹಾಜರಾತಿಯನ್ನು ನಿರಂತರ ಆ್ಯಪ್ ಮೂಲಕ ದಾಖಲಿಸಲಾಗುತ್ತಿದ್ದು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪರೀಕ್ಷಾ ಕೈಪಿಡಿ ಮೂಲಕ ಹೆಚ್ಚಿನ ಅಂಕ ಗಳಿಸಲು ಪ್ರೋತ್ಸಾಹ ನೀಡಬೇಕು ಎಂದರು. ತಾಲೂಕಿನಲ್ಲಿ 210 ಅಂಗನವಾಡಿ ಕೇಂದ್ರಗಳಿದ್ದು, ಈಗಾಗಲೇ 18 ಕೇಂದ್ರಗಳನ್ನು ದುರಸ್ತಿಗೊಳಿಸಲಾಗಿದ್ದು, ಇನ್ನೂ 11 ಕೇಂದ್ರಗಳ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತೆರಿಗೆ ವಸೂಲಾತಿಯಲ್ಲಿ ಕಲಘಟಗಿ ತಾಲೂಕು ಜಿಲ್ಲೆಯಲ್ಲಿ ಎರಡನೇ ಸ್ಥಾನ ಪಡೆದಿದ್ದು, 20 ಗ್ರಾಮ ಪಂಚಾಯತ್‌ಗಳು ಶೇ.100 ತೆರಿಗೆ ವಸೂಲಾತಿ ಸಾಧಿಸಿವೆ. 8 ಗ್ರಾಮ ಪಂಚಾಯತ್‌ಗಳು ಶೇ.90ಕ್ಕಿಂತ ಹೆಚ್ಚು ತೆರಿಗೆ ವಸೂಲಾತಿ ಮಾಡಿದ್ದು, ಅಳ್ನಾವರ ತಾಲೂಕು ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ವಿಬಿಜಿ ರಾಮಜೀ ಯೋಜನೆಯಡಿ ರೈತರು ಕೃಷಿ ಹೊಂಡ ಹಾಗೂ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಮುಂದಾಗಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಬೇಕು. ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ದುರಸ್ತಿ ಕುರಿತು ಅಧಿಕಾರಿಗಳು ಅಗತ್ಯ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ತೆರಿಗೆ ವಸೂಲಾತಿಯಲ್ಲಿ ಸಾಧನೆ ಮಾಡಿದ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಕಲಘಟಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಸವರಾಜ ಭಾವಕರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ ಮುರಳ್ಳಿ, ತಹಶೀಲ್ದಾರ್ ಬಸವರಾಜ ಹೊಂಕಣದವರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ವಾಯ್ ಸಾವಂತ, ನಾಮನಿರ್ದೇಶಿತ ಸದಸ್ಯರಾದ ಸರಸ್ವತಿ ಮಲಕನಕೊಪ್ಪ, ಯಲ್ಲಪ್ಪ ಹುಲಿಮನಿ, ಶಿವಾನಂದ ಗಾಣಿಗೇರ, ಜೈಲಾನಿ ಅಂಗಡಿ, ಗುರಲಿಂಗಪ್ಪ ಕಂಪ್ಲಿಕೊಪ್ಪ, ಮಂಜುನಾಥ ಬಾಗೋಡಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *