
ನವಲಗುಂದ: ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ನೀಡಿದ ಕೊಡುಗೆಗಳು ಇಂದಿಗೂ ಪ್ರೇರಣೆಯಾಗಿವೆ ಎಂದು ನವಲಗುಂದ ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ ಹೇಳಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ಪುರಸಭೆ ಅಧ್ಯಕ್ಷ ಜೀವನ ಪವಾರ ಮಾತನಾಡಿ, ಡಿ. ದೇವರಾಜ ಅರಸು ಅವರು ತಮ್ಮ ಜನಪರ ಕಾರ್ಯಗಳು ಹಾಗೂ ಸಾಮಾಜಿಕ ನ್ಯಾಯದ ಪರವಾದ ಆಡಳಿತದ ಮೂಲಕ ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದರು. ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಅವರು ನೀಡಿದ ಕೊಡುಗೆಗಳು ಮಹತ್ವದ್ದಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಹಾಗೂ 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ತಾಲೂಕಿನ ವಸತಿ ನಿಲಯದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜನಪರ ಆಡಳಿತ, ಸಾಮಾಜಿಕ ಸಮಾನತೆ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಕೈಗೊಂಡ ಮಹತ್ವದ ಕಾರ್ಯಗಳನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ಕಟ್ಟಿ, ವಿಸ್ತರಣಾಧಿಕಾರಿ ಎಸ್.ಆರ್. ಗಣಾಚಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು, ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

