
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಜುಟ್ಟಲ್ ಹಾಗೂ ಹುಬ್ಬಳ್ಳಿ-ಧಾರವಾಡ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸದಾನಂದ ವಿ. ಡಂಗನವರ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕದ ವಿವಿಧ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಆದೇಶ ಹೊರಡಿಸಿದೆ. ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆಯೊಂದಿಗೆ ಸೆ. 9ರಿಂದಲೇ ನೇಮಕಾತಿಗಳು ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ರಾಜ್ಯದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ನಡೆದಿದೆ. ಈ ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರೊಂದಿಗೆ ಸಮಗ್ರ ಚರ್ಚೆ ನಡೆಸಿ ವರದಿ ಸಲ್ಲಿಸಿದ್ದರು. ಬಳಿಕ ವೀಕ್ಷಕರು ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ನಡೆದ ಪ್ರತ್ಯೇಕ ಚರ್ಚೆಗಳ ಆಧಾರದ ಮೇಲೆ ನೇಮಕಾತಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ತಿಳಿಸಿದೆ.
ಧಾರವಾಡ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ಗೆ ಹೊಸ ಸಾರಥಿಗಳ ನೇಮಕವಾಗಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಹೊಸ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ಚುರುಕು ದೊರೆಯುವ ನಿರೀಕ್ಷೆ ಪಕ್ಷದ ಕಾರ್ಯಕರ್ತರಲ್ಲಿ ಮೂಡಿದೆ.

