ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ 15ನೇ ಹಣಕಾಸು ಹಾಗೂ ಎಸ್‌ಎಫ್‌ಸಿ ಅನುದಾನದಡಿ ಒಟ್ಟು 1.01 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಪಟ್ಟಣದ 7ನೇ ವಾರ್ಡ್‌ನಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುವುದು ಹಾಗೂ ರಸ್ತೆ ಹಾಳಾಗಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಪಟ್ಟಣ ಪಂಚಾಯಿತಿಯ ವಿವಿಧ ಅನುದಾನಗಳಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಕಾಮಗಾರಿಗಳನ್ನು ಶೀಘ್ರವಾಗಿ ಆರಂಭಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು. ಪ್ರತಿಯೊಂದು ಕಾಮಗಾರಿಯೂ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಯಾವುದೇ ಕಾರಣಕ್ಕೂ ಬಿಲ್ ಪಾವತಿಗೆ ಅವಕಾಶ ನೀಡುವುದಿಲ್ಲ ಎಂದು ಶಾಸಕ ಎಂ.ಆರ್. ಮಂಜುನಾಥ್ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ವಾರ್ಡ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ನಾಮಫಲಕಗಳ ಅನಾವರಣ ನೆರವೇರಿಸಿ, ಪೂಜಾ ವಿಧಿವಿಧಾನಗಳೊಂದಿಗೆ ಭೂಮಿಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಇದೆ ಸಮಯದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಅಭಿಯಂತರ ನಾಗರಾಜು, ಮುಖಂಡರಾದ ನಟರಾಜು, ವಿಜಯ್ ಕುಮಾರ್, ಜಯರಾಮು, ಗೋವಿಂದ, ಬಸವರಾಜು, ಅಭಿ, ಶ್ರೀನಿವಾಸ್, ಮೊಕ್ತಾರ್, ಮಹದೇವಶೆಟ್ಟಿ ಸೇರಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


