ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಪ್ರಮುಖ ಸ್ಥಾನವಿದ್ದು, ಪಠ್ಯಜ್ಞಾನದ ಜತೆಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ ಮತ್ತು ಕೌಶಲ್ಯವನ್ನು ಗುರುತಿಸಿಕೊಂಡು ಭವಿಷ್ಯದ ಗುರಿಯತ್ತ ಮುನ್ನಡೆಯಬೇಕು ಎಂದು ಹೇಳಿದರು.
ಶಿಕ್ಷಣದ ಜತೆಗೆ ಶಿಸ್ತು, ಸಂಸ್ಕಾರ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಅಗತ್ಯ. ವಿದ್ಯಾರ್ಥಿಗಳು ತಮ್ಮ ಗುರುಗಳು, ಪೋಷಕರು ಹಾಗೂ ಸಮಾಜದ ಬಗ್ಗೆ ಗೌರವದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವಿ. ರಶ್ಮಿ ಮಹೇಶ್ ಕರೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ಕೆ ಮಹತ್ವವಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ದೊರೆತಾಗ ಅವರು ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ದೊರೆಯುತ್ತದೆ. ಶಿಕ್ಷಣದ ಉದ್ದೇಶ ಕೇವಲ ಅಂಕ ಗಳಿಸುವುದಲ್ಲ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವೂ ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶೇ.95ಕ್ಕೂ ಅಧಿಕ ಅಂಕ ಗಳಿಸಿದ ಸುಮಾರು 2,200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಚೈತನ್ಯನಾಥ ಸ್ವಾಮೀಜಿ, ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಎಸ್. ಭರತ್, ಪ್ರೌಢ ಶಿಕ್ಷಣ ನಿರ್ದೇಶಕ ಎನ್. ಶ್ರೀಕಂಠ, ಮೈಸೂರು ವಿಭಾಗೀಯ ಕಾರ್ಯದರ್ಶಿ ಡಿ.ಆರ್. ಅಮಿತ್, ಮಂಡ್ಯ ಉಪನಿರ್ದೇಶಕ ಬಸವರಾಜು, ಕಾಲೇಜು ವಿಭಾಗಗಳ ಉಪನಿರ್ದೇಶಕ ಪ್ರಸನ್ನಕುಮಾರ್ ಹಾಗೂ ನಾಗಮಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.



