

ಧಾರವಾಡ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಧಾರವಾಡ ಗ್ರಾಮೀಣ ಘಟಕದಿಂದ ಡಿಸಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ಅಂತ್ಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಧರಣಿಯ ಸಮಯದಲ್ಲಿ ಮಾತನಾಡಿದ ಹು-ಧಾ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಸಭಾನಾಯಕ ಈರೇಶ ಅಂಚಟಗೇರಿ, ಜಿಲ್ಲೆಯಲ್ಲಿ ರೈತರಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡಲು ಯಾರೂ ಇಲ್ಲ. ಕೇವಲ ನಾಟಕ ಮಾಡಲು ಕೃಷಿ ಮೇಳ ಆಯೋಜಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ರೈತರ ಸಂಕಷ್ಟ ತಿಳಿಯದೇ ಇರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಧರಣಿ ನಿರತರಾಗಿದ್ದ ರೈತರು ಮಧ್ಯಾಹ್ನದ ಹೊತ್ತಿಗೆ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿ ಧರಣಿಯನ್ನು ಕೈಬಿಟ್ಟರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ, ರೈತ ಹೋರಾಟಗಾರರಾದ ಗಂಗಾಧರ ಪಾಟೀಲ ಕುಲಕರ್ಣಿ, ಸವಿತಾ ಅಮರಶೆಟ್ಟಿ, ಶಶಿ ಕುಲಕರ್ಣಿ, ಶಂಕರ ಬೆಳಕೆ, ಬಸು ಬಾಳಗಿ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

