
ಬೆಂಗಳೂರು, ಸೆ. 25: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದ್ದು, ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಸೆಪ್ಟೆಂಬರ್ 24ರಂದು ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21, 2026ರಂದು ಪ್ರಕರಣವನ್ನು de novo (ಹೊಸದಾಗಿ) ತನಿಖೆ ನಡೆಸುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ SIT ರಚಿಸಿದೆ. ಪ್ರಕರಣದ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ, ಸಂಬಂಧಪಟ್ಟ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಹೊಸದಾಗಿ ರಚಿಸಿರುವ SITಗೆ ಐಜಿಪಿ ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಗುಪ್ತಚರ ವಿಭಾಗದ ಬೆಂಗಳೂರು ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಬೆಂಗಳೂರಿನ CID ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರು ತಂಡದ ಸದಸ್ಯರಾಗಿದ್ದಾರೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಈ ಹಿಂದೆ ಬೆಳ್ತಂಗಡಿ ಪೊಲೀಸರು, ಕರ್ನಾಟಕ CID ಅಥವಾ CBI ತನಿಖೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳನ್ನು ಹೊಸ SITಗೆ ಸೇರಿಸದಂತೆ ಸೂಚಿಸಲಾಗಿದೆ. ಹೀಗಾಗಿ ಹಿಂದಿನ ತನಿಖೆಗಳಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಂದ ಪ್ರತ್ಯೇಕವಾಗಿ ಹೊಸ ತಂಡ ತನಿಖೆ ನಡೆಸಲಿದೆ.
2012ರ ಅಕ್ಟೋಬರ್ 9ರಂದು ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ಧರ್ಮಸ್ಥಳದ ಸಮೀಪದ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು CID ಹಾಗೂ CBIಗೆ ವರ್ಗಾಯಿಸಲಾಗಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು 2023ರಲ್ಲಿ ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು.
ಇದೀಗ ಹೊಸ SIT ಪ್ರಕರಣವನ್ನು ಆರಂಭದಿಂದಲೇ ಪರಿಶೀಲಿಸಿ, ಲಭ್ಯವಿರುವ ದಾಖಲೆಗಳು, ಸಾಕ್ಷ್ಯಾಧಾರಗಳು ಹಾಗೂ ಹಿಂದಿನ ತನಿಖೆಯ ಅಂಶಗಳನ್ನು ಪರಿಗಣಿಸಿ ಮರುತನಿಖೆ ನಡೆಸಲಿದೆ. ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ಜವಾಬ್ದಾರಿ SITಗೆ ನೀಡಲಾಗಿದೆ.
ಸುಪ್ರೀಂ ಕೋರ್ಟ್‌ನ ಆದೇಶವು ತನಿಖೆಗೆ ಒಳಪಡುವ ಇತರ ವ್ಯಕ್ತಿಗಳ ಪಾತ್ರದ ಕುರಿತು ಯಾವುದೇ ಅಂತಿಮ ಅಥವಾ ಪ್ರಾಥಮಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲ. ಹೀಗಾಗಿ ಹೊಸ SIT ತನಿಖೆಯಲ್ಲಿ ಲಭ್ಯವಾಗುವ ಸಾಕ್ಷ್ಯಾಧಾರಗಳು ಹಾಗೂ ನ್ಯಾಯಾಲಯಕ್ಕೆ ಸಲ್ಲಿಸುವ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಗಳ ದಿಕ್ಕು ನಿರ್ಧಾರವಾಗಲಿದೆ.

