ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

Spread the love

ಚಾಮರಾಜನಗರ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೆ ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ವಿಶೇಷವಾಗಿ ಅರಣ್ಯ ಭಾಗಗಳಲ್ಲಿ ವಾಸಿಸುತ್ತಿರುವ ಜನರಿಗಾಗಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಬಾರದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಿ ಜನರಿಗೆ ನೀರು ಒದಗಿಸುವುದು ಆದ್ಯತೆಯಾಗಿದೆ. ಅರಣ್ಯ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲು ಈಗಾಗಲೇ ಜಾರಿಗೊಳಿಸಲಾಗುತ್ತಿರುವ ಯೋಜನೆಗಳಿಗೆ ಅಡಚಣೆ ಮಾಡಬಾರದು. ಪೋಡುಗಳಲ್ಲಿ ಕುಡಿಯುವ ನೀರು ಪೂರೈಸಲು ಅವಕಾಶ ಮಾಡಿಕೊಡಬೇಕು. ಯಾವುದೇ ರೀತಿಯ ವಿಳಂಬ ಧೋರಣೆ ಅನುಸರಿಸಬಾರದು ಎಂದು ಸಚಿವರು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಇನ್ನೂ ಎಷ್ಟು ಭಾಗಗಳಲ್ಲಿ ಕಾಮಗಾರಿ ಅಪೂರ್ಣವಾಗಿದೆ ಹಾಗೂ ಇದುವರೆಗೆ ಎಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ ಎಂಬ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ಪೂರೈಕೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ನೀರು ಒದಗಿಸುವುದು ಅತ್ಯಂತ ತುರ್ತು ಕೆಲಸವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಪುರಾಣಿಪೋಡುವಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಆದಿವಾಸಿ ಕಾಲೋನಿಗಳ ಜನರು ಸಂಕಷ್ಟದಲ್ಲಿದ್ದು, ಅವರಿಗೆ ಮೂಲ ಸೌಕರ್ಯಗಳ ಕೊರತೆಯಾಗಬಾರದು. ಮನೆಗಳ ಸೌಲಭ್ಯಕ್ಕೂ ಅವಕಾಶ ಕಲ್ಪಿಸಲಾಗಿದ್ದು, ಆದಷ್ಟು ಬೇಗ ಜನರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ನೀಗಿಸಲು ಹೆಚ್ಚಿನ ಅನುದಾನದ ಅಗತ್ಯವಿದ್ದು, ಶೀಘ್ರ ಅನುದಾನ ಒದಗಿಸಬೇಕು. ಜೆಜೆಎಂ ಕಾಮಗಾರಿ ನಡೆದಿದ್ದರೂ ಪರಿಪೂರ್ಣವಾಗಿಲ್ಲ. ಈ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಿಗೆ ನೀರು ಪೂರೈಸಲು ಅಗತ್ಯಕ್ಕೆ ಅನುಗುಣವಾಗಿ ಅನುದಾನ ಹಂಚಿಕೆ ಮಾಡಬೇಕು. ಗಂಭೀರವಾಗಿ ಕ್ರಮ ಕೈಗೊಂಡರೆ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಲಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಯೋಜನಾಬದ್ಧವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಮೇವು ಲಭ್ಯತೆ ಕುರಿತು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು, ಈಗಾಗಲೇ ಮೇವು ಬೆಳೆಯಲು ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ನೀರು ಲಭ್ಯವಿರುವ ಕಡೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಕಿಟ್‌ಗಳನ್ನು ನೀಡಿ ಮೇವು ಬೆಳೆಯಲು ಉತ್ತೇಜಿಸಬೇಕು. ಎಲ್ಲಿ ಮೇವಿನ ಅಭಾವವಿದೆಯೋ ಅಂತಹ ಕಡೆಗಳಲ್ಲಿ ಮೇವಿನ ಕಿಟ್‌ಗಳನ್ನು ವಿತರಿಸಲು ಕೂಡಲೇ ಮುಂದಾಗಬೇಕು. ಅಗತ್ಯವಿರುವ ಹೆಚ್ಚಿನ ಪ್ರಮಾಣದ ಮೇವಿನ ಕಿಟ್‌ಗಳನ್ನು ಒದಗಿಸಲಾಗುವುದು ಎಂದರು.

ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿ ಪಡೆದ ಸಚಿವರು, ನೀರಿನ ಕೊರತೆಯಿಂದ ಅರಿಶಿಣ, ಆಲೂಗಡ್ಡೆ, ಬೆಳ್ಳುಳ್ಳಿ ಸೇರಿದಂತೆ ವಿವಿಧ ಬೆಳೆಗಳು ನಷ್ಟವಾಗಿವೆ. ಅಧಿಕಾರಿಗಳು ನೀಡುವ ವರದಿಯಲ್ಲಿ ನಷ್ಟವಾಗಿರುವ ಎಲ್ಲ ಬೆಳೆಗಳ ಮಾಹಿತಿಯೂ ನಿಖರವಾಗಿರುವಂತೆ ನಿಗಾ ವಹಿಸಬೇಕು. ಇಲಾಖೆ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಜನರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಹಲವೆಡೆ ಅವೈಜ್ಞಾನಿಕವಾಗಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದ ಸಚಿವರು, ಅಪಘಾತಗಳು ಸಂಭವಿಸದಂತೆ ಸೂಚನಾ ಫಲಕಗಳು, ವಿದ್ಯುತ್ ದೀಪಗಳು ಹಾಗೂ ಸಂಚಾರ ನಿಯಮಗಳ ಮಾಹಿತಿಯನ್ನು ಅಳವಡಿಸಬೇಕು ಎಂದು ತಿಳಿಸಿದರು.

ಈ ವೇಳೆ ಶಾಸಕ ಎಂ.ಆರ್. ಮಂಜುನಾಥ್ ಅವರು ಸತ್ತೇಗಾಲ ಬೈಪಾಸ್ ಬಳಿ ಹೈಮಾಸ್ಟ್ ಲೈಟ್ ಅಳವಡಿಸದಿರುವುದರಿಂದ ಈಗಾಗಲೇ ಗಂಭೀರ ಅಪಘಾತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ಈ ಬಗ್ಗೆ ಶೀಘ್ರ ಕ್ರಮ ವಹಿಸಬೇಕು ಎಂದು ಹೇಳಿದರು. ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಗಳಲ್ಲಿಯೂ ಸಂಚಾರ ಫಲಕಗಳಿಲ್ಲದೆ, ಹಲವೆಡೆ ಅವೈಜ್ಞಾನಿಕ ಕಾಮಗಾರಿಯಿಂದ ತೊಂದರೆಯಾಗುತ್ತಿದೆ ಎಂದು ಗಮನಸೆಳೆದರು. ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಗುಂಡ್ಲುಪೇಟೆ ಭಾಗದ ಹೆದ್ದಾರಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯಾಗುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಅಂಗನವಾಡಿಗಳ ಕುರಿತು ಪರಾಮರ್ಶಿಸಿದ ಸಚಿವರು, ಎಷ್ಟು ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿವೆ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಇನ್ನೂ ಎಷ್ಟು ನಿವೇಶನಗಳ ಅಗತ್ಯವಿದೆ ಎಂಬ ಕುರಿತು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಶ್ರೀರೂಪ ಅವರು ಅಂಗನವಾಡಿಗಳಿಗೆ ಒದಗಿಸಲಾಗಿರುವ ನಿವೇಶನಗಳ ಕುರಿತು ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಯ ಪರಿಶೀಲನೆ ವೇಳೆ ಔಷಧಗಳ ದಾಸ್ತಾನು ಸಮರ್ಪಕವಾಗಿ ಇಟ್ಟುಕೊಳ್ಳುವಂತೆ ಸಚಿವರು ಸೂಚಿಸಿದರು. ಹಾವು ಹಾಗೂ ನಾಯಿ ಕಡಿತದಂತಹ ಸಂದರ್ಭಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಅಗತ್ಯ ಔಷಧಗಳು ಲಭ್ಯವಿರಬೇಕು. ಆಸ್ಪತ್ರೆಗಳಲ್ಲಿ ತ್ವರಿತವಾಗಿ ವೈದ್ಯರ ಸೇವೆ ಹಾಗೂ ಔಷಧೋಪಚಾರ ದೊರೆಯುವಂತಾಗಬೇಕು. ಆಸ್ಪತ್ರೆಗೆ ಬರುವ ಜನರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವುದು, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಗ್ರಾಮೀಣ ವಸತಿ ಯೋಜನೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಹಾರ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ಪ್ರಾದೇಶಿಕ ಸಾರಿಗೆ ಇಲಾಖೆ, ಸಣ್ಣ ನೀರಾವರಿ, ಶಾಲಾ ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಸುದೀರ್ಘವಾಗಿ ಪರಿಶೀಲಿಸಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ವಿವರವಾಗಿ ಪರಾಮರ್ಶಿಸಲಾಯಿತು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಕೆಡಿಪಿ ಸಮಿತಿ ಸದಸ್ಯರಾದ ಶಂಕರಪ್ಪ, ಭವ್ಯ ಮುನಿರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *