ರೈತರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಅ.10ರೊಳಗೆ ದೆಹಲಿಯಲ್ಲಿ ಸಭೆಗೆ ಸಮ್ಮತಿಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಕಾರಾತ್ಮಕ ಸ್ಪಂದನೆ; 30 ರೈತ ಮುಖಂಡರ ನಿಯೋಗಕ್ಕೆ ಅವಕಾಶ

Spread the love

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.

ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಅಕ್ಟೋಬರ್ 10ರೊಳಗಾಗಿ ದೆಹಲಿಯಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಲು ಸಮ್ಮತಿ ಸೂಚಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ರೈತ ಮುಖಂಡರನ್ನು ಒಳಗೊಂಡ 30 ಜನರ ನಿಯೋಗ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ರೈತರ ಪ್ರಮುಖ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮಗ್ರವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸಂಬಂಧಿಸಿದ ಕೇಂದ್ರ ಸಚಿವರು ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಪೆಟ್ರೋಲಿಯಂ ಸಚಿವರು ಹಾಗೂ ಕಬ್ಬು ಬೆಳೆಗೆ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರಬೇಕು ಎಂದು ಆಗ್ರಹಿಸಿದ್ದಾರೆ.

ಬೇಡಿಕೆಗಳ ಅಂತಿಮ ನಿರ್ಧಾರವಾಗುವವರೆಗೆ ಸಕ್ಕರೆ ಕಾರ್ಖಾನೆ ಆರಂಭಿಸದಂತೆ ಒತ್ತಾಯ

ರೈತರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಬೇಡಿಕೆಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಯಾವುದೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ರೈತರು ಮುಂದಿಡುವ ಬೆಂಬಲ ಬೆಲೆ ಹಾಗೂ ಎಂಆರ್‌ಪಿ ದರ ನಿಗದಿ ಸೇರಿದಂತೆ ಪ್ರಮುಖ ಬೇಡಿಕೆಗಳ ಕುರಿತು ದೆಹಲಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ರೈತ ಮುಖಂಡರು ತಿಳಿಸಿದ್ದಾರೆ. ರೈತರ ಬೇಡಿಕೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕು ಎಂಬುದೇ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಗುರ್ಲಾಪುರದಲ್ಲಿ ಮತ್ತಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ಹೋರಾಟಕ್ಕೆ ಪೊಲೀಸರೂ ಹೈರಾಣ

ಇಂದು ನಡೆದ ರೈತರ ಹೋರಾಟ ಪೊಲೀಸರಿಗೂ ಸವಾಲಾಗಿ ಪರಿಣಮಿಸಿತು. ಯಾವುದೇ ಮುನ್ಸೂಚನೆ ಇಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಏಕಾಏಕಿ ಆಗಮಿಸಿದ್ದರಿಂದ ಪರಿಸ್ಥಿತಿ ಯಾವ ಹಂತಕ್ಕೆ ತಲುಪಬಹುದು ಎಂಬ ಬಗ್ಗೆ ಪೊಲೀಸರಿಗೆ ಸ್ಪಷ್ಟತೆ ಇರಲಿಲ್ಲ.

ರೈತರ ಹೋರಾಟದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಸ್ಥಳದಲ್ಲಿ ನಿಯೋಜನೆಗೊಂಡಿದ್ದರು. ಪ್ರತಿಭಟನೆ ಮುಗಿಯುವವರೆಗೂ ಕರ್ತವ್ಯದಲ್ಲಿದ್ದ ಬಹುತೇಕ ಪೊಲೀಸರು ಊಟವನ್ನೂ ಮಾಡದೆ ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬಂದಿತು. ರೈತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೂಡ ಹೆಚ್ಚಿಸಲಾಯಿತು.

ಪ್ರತಿಭಟನೆ ಶಾಂತಿಯುತವಾಗಿ ಅಂತ್ಯಗೊಳ್ಳುವವರೆಗೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ನಿರತರಾಗಿದ್ದರು. ರೈತರ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡ ಬಳಿಕ ಪೊಲೀಸರು ಕರ್ತವ್ಯದಿಂದ ನಿರ್ಗಮಿಸಿದರು.

Leave a Reply

Your email address will not be published. Required fields are marked *