ಕೆಪಿಎಸ್‌ಸಿ ಅಕ್ರಮ: ವಿಚಾರಣೆ ವೇಳೆ ನಾಲ್ವರ ಹೆಸರು ಬಾಯ್ಬಿಟ್ಟ ಜ್ಞಾನೇಂದ್ರ

Spread the love

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ಇತರ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಆರೋಪಗಳ ತನಿಖೆ ತೀವ್ರಗೊಂಡಿದೆ. ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಐಡಿ ನಡೆಸುತ್ತಿರುವ ತನಿಖೆಯ ವೇಳೆ ಹಲವು ಮಹತ್ವದ ಮಾಹಿತಿ ಹೊರಬಂದಿದೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಐಎಎಸ್ ಅಧಿಕಾರಿ ಹಾಗೂ ಪ್ರಕರಣದ ಆರೋಪಿ ಜ್ಞಾನೇಂದ್ರ ಕುಮಾರ್ ಅವರು ಕೆಪಿಎಸ್‌ಸಿಗೆ ಸಂಬಂಧಿಸಿದ ನಾಲ್ವರು ವ್ಯಕ್ತಿಗಳ ಹೆಸರುಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಶಿವಶಂಕರಪ್ಪ ಸಾಹುಕಾರ್, ಬಿ.ವಿ. ಗೀತಾ, ಶಾಂತಾ ಹೊಸಮನಿ ಸೇರಿದಂತೆ ನಾಲ್ವರು ಹೆಸರುಗಳು ವಿಚಾರಣೆಯಲ್ಲಿ ಪ್ರಸ್ತಾಪವಾಗಿದ್ದು, ಇವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೆಪಿಎಸ್‌ಸಿಯ ಕೆಲ ಸದಸ್ಯರು ಹಾಗೂ ಸಿಬ್ಬಂದಿ ಅಭ್ಯರ್ಥಿಗಳಿಂದ ಹಣ ಪಡೆದಿರುವ ಬಗ್ಗೆಯೂ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳು ಪಡೆದಿರುವ ಅಂಕ ಹಾಗೂ ಮೆರಿಟ್‌ನಲ್ಲಿ ಅವರ ಸ್ಥಾನಮಾನಕ್ಕೆ ಅನುಗುಣವಾಗಿ ಲಂಚದ ಮೊತ್ತ ನಿಗದಿಪಡಿಸಲಾಗುತ್ತಿತ್ತು ಎಂಬ ವಿಚಾರವೂ ಇಡಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆಯುವ ಅಭ್ಯರ್ಥಿಗಳ ವಿವರಗಳನ್ನು ಸಂಗ್ರಹಿಸುತ್ತಿದ್ದ ಕೆಪಿಎಸ್‌ಸಿ ಸದಸ್ಯರು ಹಾಗೂ ಸಿಬ್ಬಂದಿ, ಮಧ್ಯವರ್ತಿಗಳ ಮೂಲಕ ಅಂತಹ ಅಭ್ಯರ್ಥಿಗಳನ್ನು ಸಂಪರ್ಕಿಸಿ ಉದ್ಯೋಗ ಕೊಡಿಸುವ ಭರವಸೆ ನೀಡುತ್ತಿದ್ದರು ಎಂದು ಹೇಳಲಾಗಿದೆ.

ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಅಭ್ಯರ್ಥಿಗಳಿಂದ ಮುಂಗಡವಾಗಿ ₹5 ಲಕ್ಷದಿಂದ ₹10 ಲಕ್ಷದವರೆಗೆ ಹಣ ಪಡೆಯಲಾಗುತ್ತಿತ್ತು ಎನ್ನಲಾಗಿದೆ. ಆದರೆ ಒಟ್ಟು ಎಷ್ಟು ಹಣ ನೀಡಬೇಕು ಎಂಬುದನ್ನು ಆರಂಭದಲ್ಲೇ ತಿಳಿಸುತ್ತಿರಲಿಲ್ಲ. ಈ ಕಾರಣದಿಂದಾಗಿ ಹಲವು ಅಭ್ಯರ್ಥಿಗಳು ಪೊಲೀಸರಿಗೆ ದೂರು ನೀಡಿರಲಿಲ್ಲ ಎನ್ನಲಾಗಿದ್ದು, ಈ ಕುರಿತ ಮಾಹಿತಿಯನ್ನು ಜ್ಞಾನೇಂದ್ರ ಕುಮಾರ್ ಅವರು ಇಡಿ ಅಧಿಕಾರಿಗಳ ಮುಂದೆ ಬಹಿರಂಗಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ಅಕ್ರಮ

ಕೆಪಿಎಸ್‌ಸಿಯ ಮಾಜಿ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಯ ಬಳಿಕ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 2026ರ ಜನವರಿಯಲ್ಲಿ ನಡೆದ 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಮಧ್ಯವರ್ತಿಗಳಿಗೆ ಸೋರಿಕೆ ಮಾಡಿದ್ದರು ಎಂಬ ಗಂಭೀರ ಆರೋಪ ಅವರ ಮೇಲಿದೆ.

ಜ್ಞಾನೇಂದ್ರ ಅವರಿಂದ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ದ ಪ್ರಮುಖ ಮಧ್ಯವರ್ತಿಯೊಬ್ಬರು ಅಭ್ಯರ್ಥಿಗಳನ್ನು ರೆಸಾರ್ಟ್‌ಗಳಿಗೆ ಕರೆದೊಯ್ದು ಪ್ರಶ್ನೆಗಳಿಗೆ ಸಂಬಂಧಿಸಿದ ಉತ್ತರಗಳನ್ನು ಕಂಠಪಾಠ ಮಾಡಿಸಿದ್ದರೆಂಬ ಆರೋಪವೂ ತನಿಖೆಯಲ್ಲಿ ಕೇಳಿಬಂದಿದೆ. ಈ ಮಧ್ಯವರ್ತಿಯ ಮನೆ ಮೇಲೆ ನಡೆದ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿಗಳ ಹಣಕಾಸು ವ್ಯವಹಾರಗಳ ಲೆಕ್ಕವಿರುವ ರಹಸ್ಯ ಡೈರಿ ಪತ್ತೆಯಾಗಿರುವುದಾಗಿ ತನಿಖಾ ಮೂಲಗಳು ತಿಳಿಸಿವೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಿದ್ದು, ಜ್ಞಾನೇಂದ್ರ ಕುಮಾರ್ ಅವರ ವಿಚಾರಣೆಯಲ್ಲಿ ಹೊರಬಂದಿರುವ ಮಾಹಿತಿಯ ಆಧಾರದ ಮೇಲೆ ಮತ್ತಷ್ಟು ಮಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *