ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆಗೆ ಸಚಿವ ಸಂಪುಟ ಒಪ್ಪಿಗೆ

Spread the love

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್‌ಗೆ ₹8ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಆದರೆ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗಳ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಬೆಲೆ ಏರಿಕೆ ಜಾರಿಗೆ ಚುನಾವಣಾ ಆಯೋಗದ ಅನುಮತಿ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೂಲಕ ಪತ್ರ ಬರೆಯಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಕುರಿತು ಚರ್ಚಿಸಿ ಒಪ್ಪಿಗೆ ನೀಡಲಾಗಿದೆ. ಚುನಾವಣಾ ಆಯೋಗ ಅನುಮತಿ ನೀಡಿದಲ್ಲಿ ನ.1ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆ ಇದೆ.

ರಾಜ್ಯದ ವಿವಿಧ ಹಾಲು ಒಕ್ಕೂಟಗಳು ಹಾಲಿನ ಮಾರಾಟ ದರ ಹೆಚ್ಚಿಸುವಂತೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಹಾಲು ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ದರ ಏರಿಕೆಗೆ ಮನವಿ ಸಲ್ಲಿಸಿತ್ತು. ಹೈನುಗಾರಿಕೆಗೆ ಅಗತ್ಯವಿರುವ ಪಶು ಆಹಾರ, ಮೇವು ಹಾಗೂ ಔಷಧೋಪಚಾರ ಸೇರಿದಂತೆ ನಿರ್ವಹಣಾ ವೆಚ್ಚ ನಿರಂತರವಾಗಿ ಹೆಚ್ಚಾಗುತ್ತಿದೆ. ಇದರಿಂದ ಹಾಲಿನ ಉತ್ಪಾದನಾ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ. ಸದ್ಯದ ಬರ ಪರಿಸ್ಥಿತಿಯಲ್ಲಿ ಬೆಳೆ ಕೊರತೆ ಹಾಗೂ ಮೇವಿನ ಲಭ್ಯತೆ ಕಡಿಮೆಯಾಗಿರುವುದರಿಂದ ಹೈನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ನಿಯೋಗ ತಿಳಿಸಿತ್ತು.

ಕರ್ನಾಟಕದಲ್ಲಿ ಹಾಲು ಒಕ್ಕೂಟಗಳು ಉತ್ಪಾದಕರಿಂದ ಟೋನ್ಡ್ ಹಾಲನ್ನು ಪ್ರತಿ ಲೀಟರ್‌ಗೆ ₹35ಕ್ಕೆ ಖರೀದಿಸುತ್ತಿವೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ₹41.50, ಕೇರಳದಲ್ಲಿ ₹41.80, ಮಹಾರಾಷ್ಟ್ರದಲ್ಲಿ ₹41 ಹಾಗೂ ತಮಿಳುನಾಡಿನಲ್ಲಿ ₹42.24 ದರದಲ್ಲಿ ಖರೀದಿಸಲಾಗುತ್ತಿದೆ. ಇದೇ ರೀತಿ ಹಾಲಿನ ಗರಿಷ್ಠ ಮಾರಾಟ ದರದಲ್ಲಿಯೂ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರತಿ ಲೀಟರ್‌ಗೆ ಕನಿಷ್ಠ ₹12ರಷ್ಟು ಕಡಿಮೆ ದರವಿದೆ ಎಂದು ಹಾಲು ಒಕ್ಕೂಟಗಳ ನಿಯೋಗ ವಾದಿಸಿತ್ತು.

Leave a Reply

Your email address will not be published. Required fields are marked *