ಅ. 26ರಂದು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

Spread the love

ಚಾಮರಾಜನಗರ : ನಗರದಾದ್ಯಂತ ಅಕ್ಟೋಬರ್ 26ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಶ್ರೀರೂಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಮುಖಂಡರು, ವಿವಿಧ ಸಮುದಾಯಗಳ ಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಂದ ಜಯಂತಿ ಆಚರಣೆಗೆ ಸಂಬಂಧಿಸಿದ ಸಲಹೆ ಮತ್ತು ಅಭಿಪ್ರಾಯಗಳನ್ನು ಆಲಿಸಲಾಯಿತು.

 

ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಗ್ರಂಥದ ರಚನೆಯ ಮೂಲಕ ಸಮಾಜಕ್ಕೆ ಅಮೂಲ್ಯ ಸಂದೇಶಗಳನ್ನು ನೀಡಿದ್ದಾರೆ. ಹೀಗಾಗಿ ಅವರ ಜಯಂತಿಯನ್ನು ಜಿಲ್ಲೆಯಾದ್ಯಂತ ಹಬ್ಬದ ವಾತಾವರಣದಲ್ಲಿ ಆಚರಿಸಬೇಕು. ಎಲ್ಲ ತಾಲೂಕುಗಳು, ಶಾಲಾ-ಕಾಲೇಜುಗಳಲ್ಲಿಯೂ ಜಯಂತಿ ಕಾರ್ಯಕ್ರಮ ಆಯೋಜಿಸಬೇಕು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯ ಸಾಂಸ್ಕೃತಿಕ ಕಲಾತಂಡಗಳನ್ನು ಪಾಲ್ಗೊಳ್ಳುವಂತೆ ಮಾಡಿ ವ್ಯವಸ್ಥಿತವಾಗಿ ನಡೆಸಬೇಕು. ಸಮಾಜದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ವಾಲ್ಮೀಕಿಯವರ ಜೀವನ ಮತ್ತು ಸಾಧನೆ ಕುರಿತು ಬೆಳಕು ಚೆಲ್ಲುವ ಉತ್ತಮ ಭಾಷಣಕಾರರನ್ನು ಆಹ್ವಾನಿಸಬೇಕು ಎಂದು ಮುಖಂಡರು ಸಭೆಯಲ್ಲಿ ಸಲಹೆ ನೀಡಿದರು.

 

ಇದೇ ವೇಳೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆ ನಿರ್ಮಿಸುವ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ವರ್ಷದ ಜಯಂತಿ ವೇಳೆಗೆ ಪ್ರತಿಮೆ ನಿರ್ಮಿಸಿ ಉದ್ಘಾಟಿಸುವುದಾಗಿ ಈ ಹಿಂದೆ ಭರವಸೆ ನೀಡಲಾಗಿತ್ತು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ, ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

 

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಅಕ್ಟೋಬರ್ 26ರಂದು ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿಂದ ಬೆಳ್ಳಿರಥದಲ್ಲಿ ಅಲಂಕರಿಸಿದ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮಾರಿಗುಡಿ ಮುಂಭಾಗ ತಲುಪಲಿದೆ. ಅಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

 

ಜಯಂತಿ ಕಾರ್ಯಕ್ರಮದ ಸುಸೂತ್ರ ನಿರ್ವಹಣೆಗಾಗಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಸಮಿತಿಯ ಅಧಿಕಾರಿಗಳು ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಬೇಕು. ಸ್ವಚ್ಛತೆ ಸೇರಿದಂತೆ ಅಗತ್ಯ ಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಇತರ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

 

ಮಹರ್ಷಿ ವಾಲ್ಮೀಕಿಯವರ ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ತಿಳಿಸುವ ಉತ್ತಮ ಭಾಷಣಕಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಜಯಂತಿಯಂದು ಎಲ್ಲ ತಾಲೂಕುಗಳಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಯಂತಿಯನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಹಾಗೂ ಶಿಷ್ಟಾಚಾರದಂತೆ ಆಚರಿಸಲು ಜನಪ್ರತಿನಿಧಿಗಳು, ಸಮಾಜದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಕನ್ನಡಪರ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

 

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಡಿವೈಎಸ್‌ಪಿ ಸ್ನೇಹರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

ಮುಖಂಡರಾದ ಎಂ. ರಾಮಚಂದ್ರ, ಶ್ರೀನಿವಾಸನಾಯಕ, ಕೃಷ್ಣನಾಯಕ, ಚಾ.ಸಿ. ಸೋಮನಾಯಕ, ಬದನಗುಪ್ಪೆ ನಾರಾಯಣ, ಬದನಗುಪ್ಪೆ ಶಿವರಾಮು, ಚಂಗುಮಣಿ, ಜಿ. ಬಂಗಾರು, ಅಮಚವಾಡಿ ಮಹೇಂದ್ರ, ಕುಮಾರ್, ನಟರಾಜು, ಶಿವು ವಿರಾಟ್, ಬಿಸಿಲವಾಡಿ ನಾರಾಯಣನಾಯಕ, ಬಸವಾಪುರ ರಮೇಶ ಸೇರಿದಂತೆ ಸಮಾಜದ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ವರದಿ ಕಾರ್ತಿಕ್ ಗೌಡ ಹನೂರು.

Leave a Reply

Your email address will not be published. Required fields are marked *