ಜಿಲ್ಲೆಗೆ ಮಂಜೂರಾಗಿರುವ ವಸತಿ ಯೋಜನೆಗಳ ಪ್ರಗತಿಗೆ ಖುದ್ದು ಸ್ಥಳ ಪರಿಶೀಲನೆ ನಡೆಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

Spread the love

ಚಾಮರಾಜನಗರ : ಜಿಲ್ಲೆಗೆ ಮಂಜೂರಾಗಿರುವ ವಿವಿಧ ನಗರ ಹಾಗೂ ಗ್ರಾಮೀಣ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ, ಪ್ರಗತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ (ಆರ್‌ಜಿಎಚ್‌ಸಿಎಲ್) ವಸತಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಪ್ರಧಾನಮಂತ್ರಿ ಆವಾಸ್ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ಡಿ. ದೇವರಾಜ ಅರಸು ವಸತಿ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಸಹಾಯಧನದೊಂದಿಗೆ ಜಿಲ್ಲೆಗೆ ಮನೆಗಳನ್ನು ಮಂಜೂರು ಮಾಡಲಾಗಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ವೇಗ ಹೆಚ್ಚಿಸಲು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮನೆಗಳ ನಿರ್ಮಾಣ ಕಾರ್ಯದಲ್ಲಿನ ಅಡೆತಡೆಗಳನ್ನು ಗುರುತಿಸಿ, ಫಲಾನುಭವಿಗಳಿಗೆ ಅಗತ್ಯ ನೆರವು ಒದಗಿಸುವ ಮೂಲಕ ಯೋಜನೆಗಳ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

 

ನಗರ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಯಲ್ಲಿ ಚಾಮರಾಜನಗರ ನಗರಸಭೆ ಶೇ. 74.94, ಕೊಳ್ಳೇಗಾಲ ನಗರಸಭೆ ಶೇ. 65.95, ಗುಂಡ್ಲುಪೇಟೆ ಪುರಸಭೆ ಶೇ. 70.52, ಹನೂರು ಪಟ್ಟಣ ಪಂಚಾಯಿತಿ ಶೇ. 78.85 ಹಾಗೂ ಯಳಂದೂರು ಪಟ್ಟಣ ಪಂಚಾಯಿತಿ ಶೇ. 79.12ರಷ್ಟು ಪ್ರಗತಿ ಸಾಧಿಸಿರುವುದನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.

 

ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಸಂಬಂಧಿಸಿದಂತೆ 2026ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಂಡಿರುವ ಪ್ರಗತಿ ಹಾಗೂ ಪ್ರಸ್ತುತ ಅನುಷ್ಠಾನದಲ್ಲಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ 2.0ರ ಬಗ್ಗೆಯೂ ಚರ್ಚಿಸಲಾಯಿತು. ಪರಿಶೀಲನೆಗೆ ಬಾಕಿ ಉಳಿದಿರುವ 104 ಅರ್ಜಿಗಳನ್ನು ಆದಷ್ಟು ಶೀಘ್ರವಾಗಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

ಪ್ರಸ್ತುತ ಪ್ರಜಾಸೇವಾ ಆಂದೋಲನ ಅಭಿಯಾನದಡಿ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆಯುತ್ತಿರುವ ಸಭೆಗಳಲ್ಲಿ ಸಾರ್ವಜನಿಕರಿಂದ ಮನೆ ನಿರ್ಮಾಣಕ್ಕೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

 

ಕೆಲವು ಕಡೆಗಳಲ್ಲಿ ಮನೆಗಳು ಮಂಜೂರಾಗಿದ್ದರೂ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗದಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ, ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.

 

ಸಭೆಯಲ್ಲಿ ಗ್ರಾಮೀಣ ವಸತಿ ಯೋಜನೆಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಮನೆಗಳ ನಿರ್ಮಾಣ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

 

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ಚಾಮರಾಜನಗರ ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಕೊಳ್ಳೇಗಾಲ ನಗರಸಭೆ ಪೌರಾಯುಕ್ತ ನಟರಾಜು, ಯಳಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ :ಕಾರ್ತಿಕ್ ಗೌಡ ಹನೂರು.

Leave a Reply

Your email address will not be published. Required fields are marked *