
ಹುಬ್ಬಳ್ಳಿ, ಅ.13: ರಾಜ್ಯದ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳು ಎದುರಿಸುತ್ತಿರುವ ಶೈಕ್ಷಣಿಕ, ಆಡಳಿತಾತ್ಮಕ ಹಾಗೂ ಆರ್ಥಿಕ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಶಾಲೆಗಳ ಅಭಿವೃದ್ಧಿಗೆ ಪೂರಕವಾದ ಸಮಗ್ರ ನೀತಿಯನ್ನು ರೂಪಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರಿ.), ಕರ್ನಾಟಕ (ರುಪ್ಸಾ) ಆಗ್ರಹಿಸಿದೆ.
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯಮಟ್ಟದ ಪತ್ರಿಕಾಗೋಷ್ಠಿಯಲ್ಲಿ ಶಾಲೆಗಳ ಮಾನ್ಯತೆ ಮತ್ತು ನವೀಕರಣ ಪ್ರಕ್ರಿಯೆಯಲ್ಲಿನ ಸಮಸ್ಯೆಗಳು, ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಹೆಚ್ಚಳ, ಆರ್ಟಿಇ ಮರುಪಾವತಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಖಾಸಗಿ ಶಾಲೆಗಳ ಅಸ್ತಿತ್ವ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲಾಯಿತು.
ರಾಜ್ಯದ ಅನೇಕ ಖಾಸಗಿ ಶಾಲೆಗಳು ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಮಕ್ಕಳಿಗೆ ಶಿಕ್ಷಣ ಒದಗಿಸುವ ಮಹತ್ವದ ಕಾರ್ಯ ನಿರ್ವಹಿಸುತ್ತಿವೆ. ಸೀಮಿತ ಆದಾಯ ಮತ್ತು ಹೆಚ್ಚುತ್ತಿರುವ ನಿರ್ವಹಣಾ ವೆಚ್ಚಗಳ ನಡುವೆಯೂ ಪೋಷಕರಿಗೆ ಆರ್ಥಿಕ ಹೊರೆಯಾಗದಂತೆ ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಆಡಳಿತ ಮಂಡಳಿಗಳು ಶ್ರಮಿಸುತ್ತಿವೆ. ಇಂತಹ ಶಾಲೆಗಳ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಅನಗತ್ಯ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಶಾಲೆಗಳ ಮಾನ್ಯತೆ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸರಳೀಕರಿಸಿ, ನಿಯಮಗಳಲ್ಲಿ ಸ್ಪಷ್ಟತೆ ಮತ್ತು ಪಾರದರ್ಶಕತೆ ತರಬೇಕು. ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಹೆಚ್ಚಳದ ಕುರಿತು ಮರುಪರಿಶೀಲನೆ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕು. ಆರ್ಟಿಇ ಅಡಿಯಲ್ಲಿ ಅರ್ಹ ಶಾಲೆಗಳಿಗೆ ಬರಬೇಕಾದ ಮರುಪಾವತಿಯನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದೆ.
ಇದಲ್ಲದೆ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ಉನ್ನತ ಶಿಕ್ಷಣದ ಅವಕಾಶಗಳನ್ನು ಉತ್ತೇಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಮತ್ತು ಸಾಮಾನ್ಯ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಶಿಕ್ಷಣ ನೀಡುತ್ತಿರುವ ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಬೇಕು. ಶಾಲೆಗಳ ಮೇಲೆ ವಿಧಿಸುವ ನಿಯಮಗಳು, ಶುಲ್ಕಗಳು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ನ್ಯಾಯಸಮ್ಮತತೆ ಮತ್ತು ಸ್ಪಷ್ಟತೆ ಇರಬೇಕು ಎಂದು ರುಪ್ಸಾ ಆಗ್ರಹಿಸಿದೆ.
ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಖಾಸಗಿ ಶಾಲಾ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವುದು ಹಾಗೂ ಶಾಲಾ ಆಡಳಿತ ಮಂಡಳಿಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಬೇಕು. ಖಾಸಗಿ ಶಾಲೆಗಳು ಮತ್ತು ಸರ್ಕಾರ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಸಮತೋಲಿತ ಅಭಿವೃದ್ಧಿ ಸಾಧ್ಯ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ರುಪ್ಸಾ ಮುಂದಿಟ್ಟಿರುವ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದರ ಜೊತೆಗೆ ರಾಜ್ಯದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಗತ್ಯ ನೀತಿ ಮತ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರುಪ್ಸಾ ರಾಜ್ಯಾಧ್ಯಕ್ಷ ಶಶಿಧರ ದಿಂಡೂರ, ಪ್ರಧಾನ ಕಾರ್ಯದರ್ಶಿ ರವಿ ಬೆಂಗಳೂರು, ಕಾರ್ಯಾಧ್ಯಕ್ಷ ಕೊಟ್ರೇಶ್, ಸಹ ಜಂಟಿ ಕಾರ್ಯದರ್ಶಿ ನಾಗರಾಜ್ ಧಾರವಾಡ ಶೆಟ್ಟರ್, ಕಾನೂನು ಸಲಹೆಗಾರ ನಾಗರಾಜ್ ರಾಂಪುರ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕಡೇಮನಿ ಹಾಗೂ ರಾಜ್ಯ ನಿರ್ದೇಶಕಿ ಅಕ್ಕಾಮಾ ಕುಂಬಾರ ಉಪಸ್ಥಿತರಿದ್ದರು.

