
ಹನೂರು: ಪೊನ್ನಾಚಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪೊನ್ನಾಚಿ ಮುಖ್ಯರಸ್ತೆಯಲ್ಲಿ ಒಣಗಿದ ಮರವೊಂದು 11 ಕೆ.ವಿ. ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಇದರಿಂದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಹಾಗೂ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಮುರಿದು, ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಪರಿಣಾಮ ಪೊನ್ನಾಚಿ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಾವುದೇ ವಾಹನಗಳು ಸಂಚರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಿಲುಕಿಕೊಂಡು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಯ ಕುರಿತು ಈಗಾಗಲೇ ವಿದ್ಯುತ್ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯ ಕೈಗೊಂಡು, ವಿದ್ಯುತ್ ಸರಬರಾಜನ್ನು ಪುನಃಸ್ಥಾಪಿಸುವುದರ ಜೊತೆಗೆ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡಿಗರ ವಿಜಯಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಪೊನ್ನಾಚಿ ಸ್ನೇಹಜೀವಿ ರಾಜ್ ಅವರು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರಸ್ತೆಗೆ ಬಿದ್ದಿರುವ ಮರ ಹಾಗೂ ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

