ಧಾರವಾಡ ಜಿಲ್ಲೆಯಲ್ಲಿ 2.88 ಲಕ್ಷ ಹೆಕ್ಟೇರ್ ಬೆಳೆ ಹಾನಿ: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ, ಡಿ ಸಿ ಸ್ನೇಹಲ್‌ ಆರ್

Spread the love

ಧಾರವಾಡ, ಅ. 29: ಜಿಲ್ಲೆಯಲ್ಲಿ ಬರದಿಂದಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಭಾರಿ ಹಾನಿಯಾಗಿದ್ದು, ಜಿಲ್ಲೆಯ ಎಂಟು ಬರಪೀಡಿತ ತಾಲ್ಲೂಕುಗಳಲ್ಲಿ ಅಂದಾಜು 2,88,077.06 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿದ್ದು, ಬೆಳೆ ಹಾನಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2,71,417.55 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆಗಳು ಹಾಗೂ 16,659.51 ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ಸಮೀಕ್ಷೆ ದಾಖಲೆ ಪರಿಶೀಲನೆ ಕಡ್ಡಾಯ

ಬೆಳೆ ಹಾನಿಗೊಳಗಾದ ರೈತರಿಗೆ ಬರ ಪರಿಹಾರ ವಿತರಿಸುವ ಪ್ರಕ್ರಿಯೆ ನಡೆಯುತ್ತಿರುವುದರಿಂದ, ರೈತರು ತಮ್ಮ ಸರ್ವೆ ನಂಬರ್‌ಗಳಲ್ಲಿ ಬೆಳೆದಿರುವ ಬೆಳೆಗಳ ವಿವರಗಳು ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಮೇಲ್ವಿಚಾರಕರ ಪರಿಶೀಲನೆ ಅಕ್ಟೋಬರ್ 31ರಂದು ನಡೆಯಲಿದ್ದು, ಮರು ಸಮೀಕ್ಷೆ ನವೆಂಬರ್ 2ರಂದು ಹಾಗೂ ಮರು ಸಮೀಕ್ಷೆಯ ಪರಿಶೀಲನೆ ನವೆಂಬರ್ 3ರಂದು ನಡೆಯಲಿದೆ. ಸಮೀಕ್ಷೆಯಾಗದ ಜಮೀನುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ನವೆಂಬರ್ 7ರಂದು ಮಹಜರ್ ಆ್ಯಪ್ ಮೂಲಕ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಬೆಳೆ ಪರಿಹಾರ ಪಡೆಯಲು ರೈತರ ಗುರುತಿನ ಸಂಖ್ಯೆ ಅಗತ್ಯ

ರೈತರು ಬೆಳೆ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಪ್ರತಿಯೊಂದು ಸರ್ವೆ ನಂಬರ್‌ಗಳನ್ನು ಫ್ರೂಟ್ಸ್‌ (FRUITS) ತಂತ್ರಾಂಶದಲ್ಲಿ ನೋಂದಾಯಿಸಿ ರೈತರ ಗುರುತಿನ ಸಂಖ್ಯೆ (ಎಫ್‌ಐಡಿ) ಪಡೆಯುವುದು ಕಡ್ಡಾಯವಾಗಿದೆ. ಇನ್ನೂ ಎಫ್‌ಐಡಿ ಪಡೆಯದ ರೈತರು ಅಗತ್ಯ ದಾಖಲೆಗಳೊಂದಿಗೆ ಕೃಷಿ, ತೋಟಗಾರಿಕೆ ಅಥವಾ ಕಂದಾಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *