
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರದಲ್ಲಿ ನವೆಂಬರ್ 6ರಿಂದ 10ರವರೆಗೆ ನಡೆಯಲಿರುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ದ್ವಿಚಕ್ರ ವಾಹನ, ಆಟೋರಿಕ್ಷಾ ಹಾಗೂ ಗೂಡ್ಸ್ ವಾಹನಗಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪುಣೂರು ಕಾಲೋನಿಯ ಕೊಡ್ಲಿ ಗ್ರಾಮದ ಪುಣುಗನೂರು ಗಾರ್ಡ್ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ 2026ರ ನವೆಂಬರ್ 6ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 10ರ ಸಂಜೆ 7 ಗಂಟೆಯವರೆಗೆ ಎಲ್ಲಾ ಮಾದರಿಯ ದ್ವಿಚಕ್ರ ವಾಹನಗಳು ಹಾಗೂ ತ್ರಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ರಸ್ತೆ ಅರಣ್ಯ ಪ್ರದೇಶದಲ್ಲಿದ್ದು, ಕಡಿದಾದ ತಿರುವುಗಳಿಂದ ಕೂಡಿದೆ. ಜಾತ್ರೆ ಸಂದರ್ಭದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳು ಸಂಭವಿಸುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಭಕ್ತರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಭಕ್ತರ ಅನುಕೂಲಕ್ಕಾಗಿ ಪಾರ್ಕಿಂಗ್ ಸ್ಥಳದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆಗೂ ಸೂಕ್ತ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಆದೇಶದ ಪ್ರತಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅರಣ್ಯ ಇಲಾಖೆ, ಉಪವಿಭಾಗಾಧಿಕಾರಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಲಾಗಿದೆ.
