
ನವಲಗುಂದ: ತಾಲೂಕಿನ ತಿರ್ಲಾಪುರ ಗ್ರಾಮದ ಪದವಿ ಪೂರ್ವ ವಿದ್ಯಾರ್ಥಿನಿ ಕು. ಸುಧಾ ಬಿ. ಬೊಮ್ಮನವರ ಅವರು ನೇಪಾಳದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಇಂಡೋ-ನೇಪಾಳ ಥ್ರೋಬಾಲ್ ಕ್ಲಬ್ ಚಾಂಪಿಯನ್ಶಿಪ್-2026 ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ (ಗ್ರಾ) ಕಾರ್ಯದರ್ಶಿ ದೇವರಾಜ್ ಬಿ. ದಾಡಿಬಾವಿ ಅವರು ತಮ್ಮ ಕಚೇರಿಯಲ್ಲಿ ಸುಧಾ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದೇವರಾಜ್ ದಾಡಿಬಾವಿ, ಗ್ರಾಮೀಣ ಭಾಗದ ಯುವಕ-ಯುವತಿಯರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಗುರಿ ಹೊಂದಿ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಗ್ರಾಮದ ಕೀರ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಹಲವು ಅವಕಾಶಗಳು ದೊರೆಯುತ್ತಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು. ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವುದರ ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಮಂಡಲ ಬಿಜೆಪಿ ಅಧ್ಯಕ್ಷ ಮಂಜುನಾಥ್ ಗಣಿ, ಮುಖಂಡರಾದ ವಿರೂಪಾಕ್ಷಪ್ಪ ಬಾವಿಕಟ್ಟಿ, ಶಂಕ್ರಪ್ಪ ಗಾಣಿಗೇರ, ಅರುಣ್ ಹುಲ್ಲೂರ, ಶಿವು ಬೊಮ್ಮನವರ, ಚಿದಾನಂದ ಆಯಟ್ಟೆ, ಶಿವರಾಜ್ ಹದರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
