ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ; ಮೂರನೇ ದಿನಕ್ಕೆ ಕಾಲಿಟ್ಟ ಹೋರಾಟ

Spread the love

ಲಕ್ಷ್ಮೇಶ್ವರ: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಮತ್ತು ಅವುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೇತೃತ್ವದಲ್ಲಿ ನವೆಂಬರ್ 17ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಲಕ್ಷ್ಮೇಶ್ವರ ತಾಲೂಕು ಘಟಕದ ಪದಾಧಿಕಾರಿಗಳು ಲಕ್ಷ್ಮೇಶ್ವರ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ತಮ್ಮ ವಿವಿಧ ಬೇಡಿಕೆಗಳ ಪಟ್ಟಿಯನ್ನು ಲಗತ್ತಿಸಿ ಸರ್ಕಾರದ ಗಮನ ಸೆಳೆದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಹೋರಾಟ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಉಳಿವು, ಶಿಕ್ಷಕರು ಹಾಗೂ ನೌಕರರ ಸೇವಾ ಭದ್ರತೆ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾನಿರತ ಶಿಕ್ಷಕರು, ಅನುದಾನಿತ, ಅನುದಾನರಹಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬೇಡಿಕೆಗಳು ಈಡೇರುವವರೆಗೂ ಶಾಲೆಗಳಿಗೆ ಹಾಜರಾಗುವುದಿಲ್ಲ. ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಈ ಹಿಂದೆ ಹಲವು ಬಾರಿ ಸರ್ಕಾರದ ಗಮನಕ್ಕೆ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ತಂದಿದ್ದರೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು. ಸರ್ಕಾರ ಕೂಡಲೇ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಡಿ.ಎನ್. ಕರಾಟೆ, ಬಿ.ಪಿ. ಕುರಹಟ್ಟಿ, ಎಂ.ಬಿ. ಸಂಗನಪೇಟ, ಎಸ್.ಎಂ. ಹಾದಿಮನಿ, ಪಿ.ಎಲ್. ಪಾಟೀಲ್, ಟಿ.ಎಸ್. ಹೂಗಾರ, ಎಂ.ಸಿ. ಹಿರೇಮಠ, ಎ.ಬಿ. ಹೂಗಾರ, ಆರ್.ಸಿ. ಉಮಚಗಿ, ಎಂ.ಬಿ. ಕಲ್ಲರ, ಎಚ್.ಎಂ. ಭಜಂತ್ರಿ, ಡಿ.ಡಿ. ಲಮಾಣಿ, ಎಸ್.ಬಿ. ಬೆಟಗೇರಿ, ಕೆ. ರವಿ, ಎ.ಬಿ. ಹುಗಾರ, ಎಸ್.ಜಿ. ಗೊಲಪ್ಪನವರ, ಜಿ.ಬಿ. ಸುಗಜನವರ, ಎಸ್.ಎಸ್. ಮಠದ, ಡಿ.ಜಿ. ವೈದ್ಯ, ಎಸ್.ಎಚ್. ತಳವಾರ, ಕವಿತಾ ಗಂಟಿ, ಜಿ.ಎನ್. ಮಳ್ಳಳ್ಳಿ, ಜಿ.ಎಚ್. ಹವಾಲ್ದಾರ್, ಎ.ಐ. ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *