ಧಾರವಾಡ : ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ, ಹಕ್ಕುಗಳನ್ನು ಕೇಳುವ ಜೊತೆಗೆ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಸಂವಿಧಾನದ ದಿನದ ಪ್ರಯುಕ್ತ ನಗರದ ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂಲಭೂತ ಕರ್ತವ್ಯಗಳು ನಮ್ಮನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತವೆ. ಉತ್ತಮ ನಾಗರಿಕರಾಗುವ ಮೂಲಕ ದೇಶ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಹಕ್ಕುಗಳನ್ನು ಕೇಳುವುದು ಸುಲಭವಾದರೂ, ನಮ್ಮ ಮೇಲಿರುವ ಜವಾಬ್ದಾರಿಗಳನ್ನು ನಿರ್ವಹಿಸುವುದು ಕಷ್ಟಕರವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಅರಿತು ಪಾಲಿಸಬೇಕು ಎಂದು ಅವರು ತಿಳಿಸಿದರು.
ರಾಷ್ಟ್ರಧ್ವಜ, ರಾಷ್ಟ್ರಗೀತೆ ಸೇರಿದಂತೆ ರಾಷ್ಟ್ರೀಯ ಚಿಹ್ನೆಗಳನ್ನು ಗೌರವಿಸುವುದು, ಸಂವಿಧಾನದ ರಾಷ್ಟ್ರತ್ವದ ಪರಿಕಲ್ಪನೆಯನ್ನು ಎತ್ತಿಹಿಡಿಯುವುದು, ಸುತ್ತಮುತ್ತಲಿನ ಎಲ್ಲರನ್ನೂ ಸಹೋದರರು ಮತ್ತು ಸಹೋದರಿಯರಂತೆ ಕಾಣುವುದು ಮತ್ತು ನಾಡಿನ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿ ಸ್ವಚ್ಛವಾಗಿಡುವುದು ನಮ್ಮ ಮೂಲಭೂತ ಕರ್ತವ್ಯಗಳಾಗಿವೆ ಎಂದರು.
ಜಿಲ್ಲೆ ಹಾಗೂ ನಗರದ ಪರಿಸ್ಥಿತಿಯನ್ನು ಗಮನಿಸಿದಾಗ ಸಾರ್ವಜನಿಕರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳುವ ಅಗತ್ಯವಿದೆ. ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ಗಳು ಸುಧಾರಣೆಗಾಗಿ ಕೆಲಸ ಮಾಡಿದರೂ ಸಾರ್ವಜನಿಕರು ಕೈ ಜೋಡಿಸದಿದ್ದರೆ, ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಸಾರ್ವಜನಿಕರು ತಮ್ಮ ಕರ್ತವ್ಯಗಳನ್ನು ಅರಿತು ಪಾಲಿಸಿದಾಗ ಮಾತ್ರ ಸ್ವಚ್ಛ ಹಾಗೂ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಅಧಿಕಾರಿಗಳು ಸಂವಿಧಾನಾತ್ಮಕ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು. ಸರ್ಕಾರ ಸಾರ್ವಜನಿಕರಿಗೆ ಒದಗಿಸಬೇಕಾದ ಸೌಲಭ್ಯ ಹಾಗೂ ಸೇವೆಗಳನ್ನು ಶ್ರದ್ಧೆಯಿಂದ, ಯಾವುದೇ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ, ಕರ್ತವ್ಯನಿಷ್ಠೆಯಿಂದ ತಲುಪಿಸಬೇಕು. ವಿವಿಧ ಒತ್ತಡಗಳ ನಡುವೆಯೂ ಸಂವಿಧಾನಾತ್ಮಕವಾಗಿ ಸಾರ್ವಜನಿಕರಿಗೆ ನೀಡಬೇಕಾದ ಸೇವೆಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ಸಂವಿಧಾನದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ನ್ಯಾಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಕಚೇರಿಗಳಿಗೆ ಬರುವ ಎಲ್ಲ ಜನರನ್ನು ಮೇಲು-ಕೀಳು ಎಂಬ ಭೇದವಿಲ್ಲದೆ ಸಮಾನವಾಗಿ ಕಾಣಬೇಕು. ಎಲ್ಲರಿಗೂ ಗೌರವ ನೀಡಿ, ನ್ಯಾಯಸಮ್ಮತವಾಗಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಎಲ್ಲರನ್ನು ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರಂತೆ ಭಾವಿಸಿ ಕೆಲಸ ಮಾಡುವುದರಿಂದ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ವಿಶೇಷವಾಗಿ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧಾರವಾಡ ಜಿಲ್ಲೆಯಿಂದ ವಿದ್ಯಾರ್ಥಿಗಳು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜಿಲ್ಲೆಯ ಮೂವರು ವಿದ್ಯಾರ್ಥಿಗಳಾದ ಅಂಕಿತಾ ಪುಟಾಣಿ, ಸೌಮ್ಯಾ ಬ್ಯಾತನಾಳ ಹಾಗೂ ಅರುಣ್ ಸುಣಗಾರ ಅವರು ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳು ಅಲ್ಲಿನ ಕಾರ್ಯಕ್ರಮದಿಂದ ಆಗಮಿಸಿದ ಬಳಿಕ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸಂವಿಧಾನ ಪೀಠಿಕೆ ಭೋದಿಸಿದರು. ಹಾಗೂ ಕರ್ನಾಟಕ ಕಲಾ ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಮಹದೇವಪ್ಪ ಬಿ. ದಳಪತಿ ಅವರು ಸಂವಿಧಾನ ದಿನಾಚರಣೆಯ ಕುರಿತು ಉಪನ್ಯಾಸ ನೀಡಿದರು. ಎಸ್.ಎಸ್. ಪಡೆದ ಅವರು ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುಂಡಲೀಕ ಮಾನವರ ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಜಿಲ್ಲೆಯ ಎಲ್ಲ ಸಮಾಜದ ಮುಖಂಡರು, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ:
ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಜುಬ್ಲಿ ವೃತ್ತದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹಾಗೂ ಬಸವಣ್ಣನವರ ಪುತ್ಥಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಬೋರಸೆ ಭೂಷಣ್ ಗುಲಾಬರಾವ್, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜನಪ್ರತಿನಿಧಿಗಳು, ಸಮಾಜದ ಮುಖಂಡರು ಮಾಲಾರ್ಪಣೆ ಮಾಡಿದರು.
ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಪಾಲನೆಯೂ ಅಗತ್ಯ : ಜಿಲ್ಲಾಧಿಕಾರಿ ಸ್ನೇಹಲ್.ಆರ್
30-ಸೆಕೆಂಡ್ ಮುಖ್ಯಾಂಶಗಳು (30-Sec AI Summary)
- ಪ್ರಮುಖ ಬೆಳವಣಿಗೆ: ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಪಾಲನೆಯೂ ಅಗತ್ಯ : ಜಿಲ್ಲಾಧಿಕಾರಿ ಸ್ನೇಹಲ್.ಆರ್
- Spread the loveಧಾರವಾಡ : ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ, ಹಕ್ಕುಗಳನ್ನು ಕೇಳುವ ಜೊತೆಗೆ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ…
- ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳಿಂದ ಸಮಗ್ರ ವರದಿ ಪರಿಶೀಲನೆ.