

ಧಾರವಾಡ,: ನಗರದ ಸಪ್ತಾಪುರದಲ್ಲಿರುವ ಪರಿಶಿಷ್ಟ ಪಂಗಡದ ಬಾಲಕರ ಹಾಸ್ಟೆಲ್ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, “ವಿದ್ಯಾಕಾಶಿ ಎಂದು ಹೆಸರು ಪಡೆದ ಧಾರವಾಡದಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ಆದರೆ, ಅವರಿಗೆ ವಸತಿ ಸೌಲಭ್ಯ ದೊರೆಯುತ್ತಿಲ್ಲ. ವಸತಿ ದೊರೆತರೂ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ಮತ್ತು ಮೂಲಭೂತ ಸೌಕರ್ಯಗಳು ಇಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಪ್ತಾಪುರದ ಎಸ್ಟಿ ಬಾಲಕರ ಹಾಸ್ಟೆಲ್ ಇದಕ್ಕೆ ಹೊರತಾಗಿಲ್ಲ. ಅಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಇಲ್ಲ. ಇದು ಬಡ ವಿದ್ಯಾರ್ಥಿಗಳನ್ನು ಅತಂತ್ರಕ್ಕೆ ತಳ್ಳುತ್ತಿರುವ ಸರ್ಕಾರದ ಧೋರಣೆ ಖಂಡನೀಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ಹಾಸ್ಟೆಲ್ ಕಟ್ಟಡ ಮಳೆಯಿಂದಾಗಿ ಸೋರುತ್ತಿದ್ದು, ಅವಶ್ಯಕತೆಗೆ ತಕ್ಕಂತೆ ಶೌಚಾಲಯಗಳು ಮತ್ತು ಸ್ನಾನದ ಗೃಹಗಳಿಲ್ಲ. ಕುಡಿಯುವ ನೀರಿನ ಘಟಕ ಮತ್ತು ಗ್ರಂಥಾಲಯದ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಅವರು ಆಗ್ರಹಿಸಿದರು.
ಮನವಿ ಪತ್ರವನ್ನು ಸ್ವೀಕರಿಸಲು ಪ್ರತಿಭಟನಾ ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮಧು ಸಣ್ಣೇರಿ ಅವರು, ವಿದ್ಯಾರ್ಥಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಚೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತ ಸಿದ್ದು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

