ಚಡಚಣ ಎಸ್‌ಬಿಐ ಬ್ಯಾಂಕ್‌ಗೆ ದರೋಡೆಕೋರರ ಲೂಟಿ: 50 ಕೆಜಿ ಚಿನ್ನ, ₹ 18 ಕೋಟಿ ದೋಚಿ ಪರಾರಿ

Spread the love

ವಿಜಯಪುರ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಗೆ ಮಂಗಳವಾರ ಸಂಜೆ ದರೋಡೆಕೋರರು ನುಗ್ಗಿ, ಸುಮಾರು 50 ಕೆಜಿ ಚಿನ್ನಾಭರಣ ಹಾಗೂ ₹ 18 ಕೋಟಿ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಮಿಲಿಟರಿ ಸಮವಸ್ತ್ರಧಾರಿಗಳಿಂದ ದರೋಡೆ
ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿ ಜನನಿಬಿಡ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ಸಿಬ್ಬಂದಿ ಕೆಲಸ ಮುಗಿಸಿ ಮನೆಗೆ ತೆರಳಲು ಸಿದ್ಧವಾಗುತ್ತಿದ್ದಾಗ, ಏಳೆಂಟು ಮಂದಿ ಮುಸುಕುಧಾರಿ ದರೋಡೆಕೋರರು ಬ್ಯಾಂಕಿನ ಮುಖ್ಯ ದ್ವಾರದಿಂದ ಒಳನುಗ್ಗಿದ್ದಾರೆ. ಮಿಲಿಟರಿ ಬಣ್ಣದ ಬಟ್ಟೆ ಧರಿಸಿದ್ದ ಅವರು, ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಬ್ಯಾಂಕ್ ವ್ಯವಸ್ಥಾಪಕ ಮತ್ತು ಸಿಬ್ಬಂದಿಗೆ ಜೀವಬೆದರಿಕೆ ಹಾಕಿದ್ದಾರೆ. ಬಳಿಕ ಎಲ್ಲರ ಕೈಕಾಲುಗಳನ್ನು ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದತ್ತ ಪರಾರಿ ಶಂಕೆ
ದರೋಡೆಕೋರರು ಕದ್ದ ಚಿನ್ನಾಭರಣ ಮತ್ತು ನಗದನ್ನು ವಾಹನಗಳಲ್ಲಿ ತುಂಬಿಕೊಂಡು ನೆರೆಯ ಮಹಾರಾಷ್ಟ್ರದತ್ತ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ದರೋಡೆ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲವಾದರೂ, ಈ ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸಾವಿರಾರು ಜನರು ಬ್ಯಾಂಕ್ ಮುಂದೆ ಜಮಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಬ್ಯಾಂಕ್ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *