
ಪದವೀಧರ ಮತದಾರರ ನೋಂದಣಿಗೆ ತಾಲೂಕುವಾರು ಐಇಸಿ ಕಾರ್ಯಕ್ರಮಗಳ ಆಯೋಜನೆಗೆ ಸೂಚನೆ
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಎಸ್. ತೊದಲಬಾಗಿ ಸೂಚನೆ
ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಪದವೀಧರ ಮತದಾರರ ನೋಂದಣಿಯನ್ನು ಉತ್ತೇಜಿಸಲು ತಾಲೂಕುಮಟ್ಟದಲ್ಲಿ ಐಇಸಿ (IEC) ಹಾಗೂ ಸ್ವೀಪ್ (SVEEP) ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಸೂಚಿಸಿದರು.
ಅವರು (ಅ.18) ಸಂಜೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಧಾರವಾಡ ಜಿಲ್ಲೆಯಲ್ಲಿ ಪದವೀಧರ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹರಾಗಿರುವ ಪ್ರತಿಯೊಬ್ಬರು ನವೆಂಬರ್ 06, 2025 ರೊಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಮತದಾರರ ಜಾಗೃತಿಗಾಗಿ ತಾಲೂಕುಮಟ್ಟದಲ್ಲಿ ವಿವಿಧ ಮಾಹಿತಿ ಹಂಚಿಕೆ (IEC) ಹಾಗೂ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಬೇಕು,” ಎಂದು ಅವರು ಹೇಳಿದರು.
ಅರ್ಹ ಮತದಾರರ ಗುರುತು ಹಾಗೂ ದಾಖಲೆ ಸಲ್ಲಿಕೆ:
1 ನೇ ನವೆಂಬರ್ 2025 ಕ್ಕೆ ಮುಂಚೆ ಕನಿಷ್ಠ ಮೂರು ವರ್ಷಗಳ ಹಿಂದೆ ಭಾರತದಲ್ಲಿನ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವವರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅರ್ಹರಾಗಿದ್ದಾರೆ. ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ನಿಯೋಜಿತ ಅಧಿಕಾರಿಗಳು ಅರ್ಹ ಮತದಾರರನ್ನು ಗುರುತಿಸಿ, ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಅರ್ಹರು ತಮ್ಮ ಅರ್ಜಿಗಳನ್ನು ನಿರ್ದಿಷ್ಟಪಡಿಸಿದ ಕಚೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಹೇಳಿದರು.
ಅವರು ಮುಂದುವರೆದು, “ವಿಳಾಸದ ದೃಢೀಕರಣಕ್ಕಾಗಿ ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್, ರೇಷನ್ ಕಾರ್ಡ್, ಇಂಡಿಯನ್ ಪಾಸ್‌ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆ ಅಥವಾ ಚುನಾವಣಾ ಆಯೋಗ ನಿರ್ದಿಷ್ಟಪಡಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು,” ಎಂದು ತಿಳಿಸಿದರು.
ಜಾಗೃತಿ ಕಾರ್ಯಕ್ರಮಗಳ ಅಗತ್ಯ:
ಮತದಾರರ ಜಾಗೃತಿಗಾಗಿ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳು ಮತ್ತು ಘನತ್ಯಾಜ್ಯ ಸಂಗ್ರಹ ವಾಹನಗಳಲ್ಲಿ ಜಿಂಗಲ್ಸ್ ಮೂಲಕ ಸಂದೇಶ ಹರಡಬೇಕು ಎಂದು ಅವರು ಸೂಚಿಸಿದರು. “ಜಿಲ್ಲೆಯ ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ಪದವೀಧರ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಖಚಿತಪಡಿಸಬೇಕು,” ಎಂದು ಉಪ ಕಾರ್ಯದರ್ಶಿ ತೊದಲಬಾಗಿ ಹೇಳಿದರು.
ಈ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ತೇಜಸ್ವಿನಿ ನಾರಾಯಣಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

