
ಧಾರವಾಡ: 2025-26 ನೇ ಸಾಲಿನ ಸೆಪ್ಟೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ (ಕೆಡಿಪಿ) ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 27 ರಂದು ಆಯೋಜಿಸಲಾಗಿದೆ.
ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಮಹತ್ವದ ಸಭೆ ನಡೆಯಲಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭುವನೇಶ ಪಾಟೀಲ ಅವರು, ಎಲ್ಲ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ತಪ್ಪದೇ ಹಾಜರಾಗಬೇಕು ಎಂದು ಸಭಾ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ. ತ್ರೈಮಾಸಿಕ ಪ್ರಗತಿಯ ಬಗ್ಗೆ ಸಭೆಯಲ್ಲಿ ಸಮಗ್ರವಾಗಿ ಪರಿಶೀಲಿಸಲಾಗುವುದು.

