ಅರ್ಹ ಪದವೀಧರರು ಮತಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Spread the love

ಧಾರವಾಡ:ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಅರ್ಹ ಪದವೀಧರರು ತಮ್ಮ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕವಾದ ‘ಸ್ವೀಪ್’ (SVEEP) ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಧಾರವಾಡ ಜಿಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿಗೆ ಸಂಬಂಧಿಸಿದ ವಿಡಿಯೋ ಸಂವಾದ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ನಿಯೋಜಿತ ಅಧಿಕಾರಿಗಳು ಅರ್ಹ ಮತದಾರರನ್ನು ಶೀಘ್ರವಾಗಿ ಗುರುತಿಸಿ, ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ತ್ವರಿತ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರು ಪದವೀಧರರಾಗಿದ್ದರೆ, ಅಂತಹ ಶಿಕ್ಷಕರು ಕಡ್ಡಾಯವಾಗಿ ಅರ್ಜಿಗಳನ್ನು ಭರ್ತಿ ಮಾಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು. ಇದೇ ವೇಳೆ, ತಹಸೀಲ್ದಾರರು ಜಿಲ್ಲೆಯಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಖುದ್ದು ಭೇಟಿ ನೀಡಿ, ಚುನಾವಣೆಯ ಕುರಿತು ಸಮಗ್ರ ಮಾಹಿತಿ ನೀಡಿ, ಅರ್ಹ ಪದವೀಧರರನ್ನು ಸಂಪರ್ಕಿಸುವ ಕಾರ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ, ಎಲ್ಲಾ ತಾಲೂಕುಗಳ ತಹಸೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *