
ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ 2025-2028ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಘಟಕಗಳ ಚುನಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಒಟ್ಟು 784 ಸ್ಥಾನಗಳಿಗೆ ಬರೋಬ್ಬರಿ 1447 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಸೋಮವಾರ (ಅಕ್ಟೋಬರ್ 27) ಕೊನೆಯ ದಿನವಾಗಿದ್ದು, ಸ್ಪರ್ಧಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಚುನಾವಣಾ ಪ್ರಕಟಣೆಯ ಪ್ರಕಾರ, ಕೆಯುಡಬ್ಲ್ಯೂಜೆ ರಾಜ್ಯ ಘಟಕ ಹಾಗೂ 31 ಜಿಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಸ್ಥಾನಗಳಿಗೆ ಈ ನಾಮಪತ್ರಗಳು ಸಲ್ಲಿಕೆಯಾಗಿವೆ. ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ನಾಮಪತ್ರ ಪರಿಶೀಲನೆ, ಹಿಂಪಡೆಯಲು ದಿನಾಂಕ ನಿಗದಿ
ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 28 ರಂದು ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದೆ. ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸುವ ಅಭ್ಯರ್ಥಿಗಳಿಗೆ ಅಕ್ಟೋಬರ್ 30 ಕೊನೆಯ ದಿನವಾಗಿದೆ. ಅಂತಿಮವಾಗಿ, ನವೆಂಬರ್ 9 ರಂದು ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

