ರಾಜ್ಯ ಹೈಕೋರ್ಟ್ ತೀರ್ಪಿನಿಂದ ಸರ್ಕಾರಕ್ಕೆ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ. ವಿಜಯೇಂದ್ರರೈತರ ಪಾಲಿಗೆ ಸರ್ಕಾರ ಬದುಕಿದ್ದೂ ಸತ್ತಂತೆ: ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ

Spread the love

ಬೆಂಗಳೂರು: ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಅವರ ಕುತಂತ್ರ ಮತ್ತು ಷಡ್ಯಂತ್ರಗಳಿಗೆ ತಡೆ ಬಿದ್ದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೈತರಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. “ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಅನುಕೂಲ ಸಿಗುತ್ತಿಲ್ಲ. ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾ ರಾಜ್ಯ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ,” ಎಂದು ಟೀಕಿಸಿದರು.

“ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯವಾಗದೇ ಇದ್ದರೆ, ಈ ಸರ್ಕಾರ ರೈತರ ಪಾಲಿಗೆ ಬದುಕಿದ್ದೂ ಸತ್ತಂತಾಗಿದೆ,” ಎಂದು ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದ್ದು, ಶಾಸಕರು ಪರದಾಡುತ್ತಿದ್ದಾರೆ ಎಂದು ಅವರು ಹೇಳಿದರು. “ಆಡಳಿತ ಪಕ್ಷದ ಶಾಸಕರು ಮತ್ತು ಸಚಿವರೇ ‘ನವೆಂಬರ್ ಕ್ರಾಂತಿ’ಯಂತಹ ಹೇಳಿಕೆಗಳನ್ನು ನೀಡುತ್ತಿರುವುದು ಆಡಳಿತ ಕುಸಿತಕ್ಕೆ ಸಾಕ್ಷಿಯಾಗಿದೆ,” ಎಂದರು.

ರೈತರ ಸಮಸ್ಯೆಗಳ ಪರಿಹಾರದ ಚರ್ಚೆ ಬದಿಗಿರಲಿ, ಇಂದು ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರದ ಈ ಒಳಜಗಳದಿಂದ ರಾಜ್ಯದ ಜನತೆ ಸರ್ಕಾರದ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು. “ಮುಖ್ಯಮಂತ್ರಿಗಳೇ ‘ನಾನೇ 5 ವರ್ಷ ಸಿಎಂ’ ಎಂದು ಹೇಳುವ ಪರಿಸ್ಥಿತಿ ಬಂದಿರುವುದು ಆಡಳಿತ ಪಕ್ಷದ ಒಳಗಿನ ವಿಶ್ವಾಸದ ಕೊರತೆಯನ್ನು ತೋರಿಸುತ್ತದೆ,” ಎಂದರು.

ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದ್ದು, ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಅದರ ಪರಿಣಾಮ ಆಡಳಿತದ ಮೇಲೆ ಬೀಳಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ವಿಜಯೇಂದ್ರ ಉಲ್ಲೇಖಿಸಿದರು. “ರಾಜ್ಯದ ಜನರಿಗೆ ಸಿಎಂ ಬದಲಾವಣೆ ಅಥವಾ ಯಾರಾಗುತ್ತಾರೆ ಎಂಬ ವಿಷಯದಲ್ಲಿ ಆಸಕ್ತಿ ಇಲ್ಲ. ಜನರು ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ,” ಎಂದು ಹೇಳಿದರು.

ಒಂದು ಪ್ರಶ್ನೆಗೆ ಉತ್ತರಿಸಿದ ವೇಳೆ ಅವರು ವ್ಯಂಗ್ಯವಾಗಿ, “ಇವರ ಒಳಜಗಳದಿಂದ ಕೆಪಿಸಿಸಿಗೆ ಬೀಗ ಹಾಕುವುದು ಇರಲಿ, ರಾಜ್ಯದ ಖಜಾನೆಗೆ ಬೀಗ ಹಾಕಿ ಕೂತಿದ್ದಾರೆ,” ಎಂದು ಟೀಕಿಸಿದರು. ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿಲ್ಲ. “ಮುಖ್ಯಮಂತ್ರಿಗಳು ರಾಜ್ಯವನ್ನು ಆರ್ಥಿಕ ಸಂಕಷ್ಟದತ್ತ ಕೊಂಡೊಯ್ಯುತ್ತಿದ್ದಾರೆ,” ಎಂದು ವಿಜಯೇಂದ್ರ ಗಂಭೀರವಾಗಿ ಆರೋಪಿಸಿದರು.

Leave a Reply

Your email address will not be published. Required fields are marked *