ಕಾಗಿನೆಲೆ ಅಭಿವೃದ್ಧಿಗೆ ₹34 ಕೋಟಿ ಕ್ರಿಯಾ ಯೋಜನೆಗೆ ಮಂಜೂರಾತಿ: ವರ್ಷಕ್ಕೊಮ್ಮೆ ಕನಕ ಉತ್ಸವ ಆಚರಣೆಗೆ ತೀರ್ಮಾನ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರದಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು ₹34 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

ಸಭೆಯ ಪ್ರಮುಖ ನಿರ್ಧಾರಗಳ ಪ್ರಕಾರ, ಇನ್ನು ಮುಂದೆ ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಉತ್ಸವದ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಲ್ಲದೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನಕ ಅಧ್ಯಯನ ಪೀಠದ ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತದೆ. ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ, ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಮತ್ತು ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲು ತೀರ್ಮಾನಿಸಲಾಯಿತು.

ಪ್ರವಾಸಿ ತಾಣಗಳ ಅಭಿವೃದ್ಧಿ:
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಕ್ರಿಯಾ ಯೋಜನೆಗಳನ್ನು ಅನುಮೋದನೆಗೆ ಸಲ್ಲಿಸಲಾಯಿತು. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯದ ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.

ಅಲ್ಲದೆ, ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆಯನ್ನು ಗುತ್ತಿಗೆ ನೀಡುವ ಕುರಿತು ಮತ್ತು ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳ ಜಾರಿಗೆ ಶೀಘ್ರ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಸಚಿವರಾದ ಶಿವಾನಂದ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್. ಎಂ. ರೇವಣ್ಣ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಸಭೆ:
ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ 5ನೇ ಸಭೆಯೂ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ಎಂ. ರೇವಣ್ಣ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *