ಧಾರವಾಡ (ಅ. 31): ಕರ್ನಾಟಕ ರಾಜ್ಯೋತ್ಸವ ದಿನಾಚರಣೆ–2025 ಕಾರ್ಯಕ್ರಮವನ್ನು ನವೆಂಬರ್ 1 ರಂದು ಧಾರವಾಡ ನಗರದ ಆರ್. ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸುತ್ತೋಲೆ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಸೂಚಿಸಿದ್ದಾರೆ.
ಹಾಜರಾತಿ ಕಡ್ಡಾಯ: ಶಿಸ್ತು ಕ್ರಮದ ಎಚ್ಚರಿಕೆ
ನವೆಂಬರ್ 1, 2025 ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಆರ್. ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಧಾರವಾಡ ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಮತ್ತು ಧಾರವಾಡ ನಗರದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಬೆಳಿಗ್ಗೆ 8:30 ಗಂಟೆಯೊಳಗಾಗಿ ಸಮಾರಂಭ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಉಪಸ್ಥಿತರಿರಬೇಕು ಎಂದು ಸೂಚಿಸಲಾಗಿದೆ.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ವತಿಯಿಂದ ಹಾಜರಾತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ಕಡ್ಡಾಯವಾಗಿ ತಮ್ಮ ಹಾಜರಾತಿಯನ್ನು ದಾಖಲಿಸುವುದು ಅತ್ಯಂತ ಕಟ್ಟುನಿಟ್ಟಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಸಬೂಬು ಸ್ವೀಕರಿಸುವುದಿಲ್ಲ
ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳವರು ಯಾವುದೇ ಸಬೂಬು ಹೇಳದೇ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಜೊತೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಒಂದು ವೇಳೆ ಇದನ್ನು ಪಾಲನೆ ಮಾಡದೇ ನಿರ್ಲಕ್ಷ್ಯವಹಿಸಿದ್ದು ಕಂಡುಬಂದಲ್ಲಿ, ಅಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸುತ್ತೋಲೆಯಲ್ಲಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

