
ವಿಜಯಪೂರ:(ಹರಪನಹಳ್ಳಿ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರದಂದು ಹರಪನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿನ ಐಷಾರಾಮಿ ಸವಲತ್ತುಗಳು, ಕಬ್ಬಿನ ಬೆಲೆ ವಿವಾದ, ಆರ್.ಎಸ್.ಎಸ್. ಸಮಾವೇಶಕ್ಕೆ ಅನುಮತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದರು.
ಪರಪ್ಪನ ಅಗ್ರಹಾರದ ಸವಲತ್ತುಗಳ ಕುರಿತು ಗಂಭೀರ ಕ್ರಮ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಈ ಅವ್ಯವಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು ಎಂದು ತಿಳಿಸಿದ ಅವರು, ನಾಳೆ (ಸೋಮವಾರ) ಗೃಹ ಸಚಿವರು ಈ ಬಗ್ಗೆ ತುರ್ತು ಸಭೆ ಕರೆದಿದ್ದಾರೆ. ಈ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಸಂಘ-ಸಂಸ್ಥೆಗಳ ಸಭೆಗೆ ಅನುಮತಿ ಕಡ್ಡಾಯ
ಆರ್.ಎಸ್.ಎಸ್. (RSS) ಸಂಘಟನೆಯನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಯಾವುದೇ ಸಂಘ ಸಂಸ್ಥೆಗಳು ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸುವುದಕ್ಕೆ ಆಯಾ ಜಿಲ್ಲಾಧಿಕಾರಿಗಳ ಬಳಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ. ಈ ಆದೇಶ ಆರ್.ಎಸ್.ಎಸ್. ಗೆ ಮಾತ್ರ ಸೀಮಿತ ಎಂದು ಅವರು ಭಾವಿಸಿಕೊಂಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಆರ್.ಎಸ್.ಎಸ್. ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.
ಕಬ್ಬಿನ ಬೆಲೆ ಮತ್ತು ಪರಿಹಾರ ವಿತರಣೆ
ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬಿನ ಬೆಲೆ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ತೀರ್ಮಾನದ ಪ್ರಕಾರ, ಕಬ್ಬಿಗೆ ನಿಗದಿಪಡಿಸಿದ ಹೆಚ್ಚುವರಿ ₹೫೦ ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಸಹ ಆದೇಶವನ್ನು ಪಾಲಿಸುತ್ತಾರೆ ಎಂದು ಭಾವಿಸಿದ್ದೇನೆ. ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಅತಿವೃಷ್ಟಿಯಿಂದ ರಾಜ್ಯದಲ್ಲಿ ಸುಮಾರು ೧೧ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಪ್ರಕರಣವು ನ್ಯಾಯಾಲಯದಲ್ಲಿದೆ. ನ್ಯಾಯಾಲಯವು ಎಂದು ಮಾಡಬೇಕೆಂದು ಸೂಚಿಸುತ್ತದೆಯೋ, ಆಗಲೇ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ತಿಳಿಸಿದರು.

