ಧಾರವಾಡ, ನ. 24 : ಪ್ರತಿ ವರ್ಷದಂತೆ ನವೆಂಬರ್ 26ರಂದು ಸಂವಿಧಾನ ದಿನವನ್ನು ಆಚರಿಸಲು ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡ ಬೃಹತ್ ಜಾಥಾ ಮತ್ತು ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸಲಿದ್ದಾರೆ. ಅಲ್ಲದೆ, ಜಾಥಾದುದ್ದಕ್ಕೂ ಡಾ|| ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಕುರಿತ ಪ್ರಮುಖ ವ್ಯಾಖ್ಯೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಲಾಗಿದೆ.
ನವೆಂಬರ್ 26, 2025ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಜಾಥಾ ಆರಂಭವಾಗಲಿದೆ. ಇದು ಕೋರ್ಟ್ ಸರ್ಕಲ್, ಆಲೂರು ವೆಂಕಟರಾವ್ ವೃತ್ತ (ಜುಬ್ಲಿ ಸರ್ಕಲ್) ಮಾರ್ಗವಾಗಿ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಸಾಗಲಿದೆ. ನಂತರ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಬೆಳಿಗ್ಗೆ 10:30 ಗಂಟೆಗೆ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವುದು.
ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

