ಧಾರವಾಡ, ಡಿ. 11: ಜಿಲ್ಲೆಯ ಗ್ರಾಮೀಣ ಭಾಗದ ಕುಶಲಕರ್ಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಹಮ್ಮಿಕೊಳ್ಳಲಾಗಿರುವ ಸುಧಾರಿತ ಉಪಕರಣ ವಿತರಣಾ ಯೋಜನೆಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಡಿಸೆಂಬರ್ 31, 2025 ರವರೆಗೆ ವಿಸ್ತರಿಸಲಾಗಿದೆ.
2025-26 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಅರ್ಹ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣಗಳನ್ನು ನೀಡಲು ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ನಿಗದಿಪಡಿಸಿದ ಕ್ರಿಯಾ ಯೋಜನೆಯ ಗುರಿಯನುಸಾರ ಕಮ್ಮಾರಿಕೆ, ಕ್ಷೌರಿಕ ಹಾಗೂ ಧೋಬಿ ವೃತ್ತಿಯ ಚಟುವಟಿಕೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕೃತವಾಗದ ಕಾರಣ, ಈ ವೃತ್ತಿಗಳಲ್ಲಿ ತೊಡಗಿರುವವರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಜಿಲ್ಲಾಡಳಿತವು ಅರ್ಜಿ ಸಲ್ಲಿಸುವ ಅವಧಿಯನ್ನು ತಿಂಗಳಾಂತ್ಯದವರೆಗೆ ವಿಸ್ತರಿಸಿದೆ.
ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗ್ರಾಮೀಣ ಭಾಗದ ಆಸಕ್ತ ಕುಶಲಕರ್ಮಿಗಳು ಜಿಲ್ಲಾ ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ dharwad.nic.in ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಯು ಕುಶಲಕರ್ಮಿಗಳಿಗೆ ಆಧುನಿಕ ತಂತ್ರಜ್ಞಾನದ ಉಪಕರಣಗಳನ್ನು ಒದಗಿಸುವ ಮೂಲಕ ಅವರ ವೃತ್ತಿ ಕೌಶಲ್ಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ಸ್ಪಷ್ಟೀಕರಣಕ್ಕಾಗಿ ಸಾರ್ವಜನಿಕರು ದೂರವಾಣಿ ಸಂಖ್ಯೆ 0836-2324798 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

