ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿ ಮನೆಗೂ ಜಾಗೃತಿ ತಲುಪಲಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Spread the love

ಧಾರವಾಡ: “ಭಾರತ ಸರ್ಕಾರವು ಮುಂದಿನ ಹತ್ತು ವರ್ಷಗಳಲ್ಲಿ ದೇಶವನ್ನು ಬಾಲ್ಯ ವಿವಾಹ ಮುಕ್ತವನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಂದು ಗ್ರಾಮವೂ ಮೊದಲು ಬಾಲ್ಯ ವಿವಾಹ ಮುಕ್ತವಾಗಬೇಕು. ಇದಕ್ಕಾಗಿ ಹಮ್ಮಿಕೊಂಡಿರುವ ನೂರು ದಿನಗಳ ಜಾಗೃತಿ ಅಭಿಯಾನ ಜಿಲ್ಲೆಯ ಪ್ರತಿ ಮನೆಗೂ ತಲುಪಬೇಕು” ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು.

​ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ಸಕ್ರಿಯಗೊಳಿಸಲಾಗಿದೆ. ಕಳೆದ ವರ್ಷ ಬಾಲ್ಯ ವಿವಾಹಗಳ ಸಂಖ್ಯೆ ಇಳಿಮುಖವಾಗಿದ್ದು, ಮುಂದಿನ ವರ್ಷ ಈ ಪ್ರಮಾಣವನ್ನು ಶೂನ್ಯಕ್ಕೆ ತರಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಅವರು ತಿಳಿಸಿದರು. ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ತಿಂಗಳು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಬಾಲ್ಯ ವಿವಾಹವು ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಮೇಲೆ ಬೀರುವ ಗಂಭೀರ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಎಫ್. ದೊಡ್ಡಮನಿ ಅವರು, ಬಾಲ್ಯ ವಿವಾಹ ತಡೆಗೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು. ವಿಶೇಷವಾಗಿ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕಾರ್ಮಿಕ ಇಲಾಖೆಗಳು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಪ್ರತಿ ಶಾಲೆಯಲ್ಲೂ ದಿನನಿತ್ಯ ಬಾಲ್ಯ ವಿವಾಹ ಮುಕ್ತ ಭಾರತದ ಕುರಿತು ಪ್ರತಿಜ್ಞೆ ಹಾಗೂ ಜಾಗೃತಿ ಮೂಡಿಸುವ ಫಲಕಗಳನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

​ವೇದಿಕೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ವಾಯ್. ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಮ್. ಹೊನಕೇರಿ ಹಾಗೂ ಡಿವೈಎಸ್‍ಪಿ ವಿನೋದ ಮುಕ್ತೇದಾರ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರೆ, ಮಹ್ಮದ್‍ಅಲಿ ತಹಶೀಲ್ದಾರ ಕಾರ್ಯಕ್ರಮ ನಿರೂಪಿಸಿದರು ಮತ್ತು ಪ್ರಕಾಶ ಕೊಡ್ಲಿವಾಡ ವಂದಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *